ADVERTISEMENT

ಮಾನ್ವಿ| ಜಮೀನುಗಳಲ್ಲಿ ರಾಸಾಯನಿಕ ಸಿಂಪಡಣೆ: ವಿದ್ಯಾರ್ಥಿಗಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 7:38 IST
Last Updated 23 ನವೆಂಬರ್ 2025, 7:38 IST
ಮಾನ್ವಿ ಪಟ್ಟಣದ ಗಾಂಧಿ ಸ್ನಾರಕ ಶಿಕ್ಷಣ ಸಂಸ್ಥೆಯ ಕಾಲೇಜಿಗೆ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಮತ್ತು ಅಧಿಕಾರಿಗಳು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು
ಮಾನ್ವಿ ಪಟ್ಟಣದ ಗಾಂಧಿ ಸ್ನಾರಕ ಶಿಕ್ಷಣ ಸಂಸ್ಥೆಯ ಕಾಲೇಜಿಗೆ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಮತ್ತು ಅಧಿಕಾರಿಗಳು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು   

ಮಾನ್ವಿ: ಪಟ್ಟಣದ ಆರ್.ಜಿ.ಕ್ಯಾಂಪ್ ರಸ್ತೆಯ ಶಿರಡಿ ಸಾಯಿಬಾಬಾ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಕೃಷಿ ಜಮೀನುಗಳಲ್ಲಿ ರೈತರು ವಿವಿಧ ಬೆಳೆಗಳಿಗೆ ಸಿಂಪಡಣೆ ಮಾಡಿದ ಕೀಟನಾಶಕದ ವಾಸನೆಯ ಪರಿಣಾಮ ಸಮೀಪದ ಶಾಲಾ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಶುಕ್ರವಾರ ನಡೆದಿದೆ.

ಸಾಯಿಬಾಬಾ ದೇವಸ್ಥಾನದ ಸಮೀಪ ಇರುವ ಗಾಂಧಿ ಸ್ಮಾರಕ ಶಿಕ್ಷಣ ಸಂಸ್ಥೆಯ ಕಾಲೇಜು, ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಶಾಲೆ ಹಾಗೂ ಆರ್.ವಿ.ಎಸ್ ಬ್ಲಾಸಂ ಶಿಕ್ಷಣ ಸಂಸ್ಥೆಯ ಶಾಲೆಗಳಲ್ಲಿ ಓದುತ್ತಿರುವ ಕೆಲವು ವಿದ್ಯಾರ್ಥಿಗಳಲ್ಲಿ ಗಂಟಲು ಉರಿ ಹಾಗೂ ವಾಂತಿಯಂಥ ಲಕ್ಷಣಗಳು ಕಂಡುಬಂದ ಕಾರಣ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು ಶುಕ್ರವಾರ ಶಾಲೆಗೆ ರಜೆ ಘೋಷಣೆ ಮಾಡಿದ್ದರು.

ತಹಶೀಲ್ದಾರ್ ಭೀಮರಾಯ ರಾಮಸಮುದ್ರ, ತಾಲ್ಲೂಕು ಆರೋಗ್ಯಧಿಕಾರಿ ಡಾ.ಶರಣಬಸವರಾಜ ಗೌಡ, ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶಕುಮಾರ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ನಂತರ ತಹಶೀಲ್ದಾರ್ ಭೀಮರಾಯ ಬಿ.ರಾಮಸಮುದ್ರ ಮಾತನಾಡಿ,‘ಜಮೀನುಗಳಲ್ಲಿ ಬಳಸಿದ ಕೀಟನಾಶಕ, ರಾಸಾಯನಿಕಗಳ ವಾಸನೆಯಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿತ್ತು. ಇಂದು ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಯಾವುದೇ ರೀತಿಯ ರಾಸಾಯನಿಕಗಳ ವಾಸನೆ ಇಲ್ಲ. ಕಾರಣ ಶಾಲೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಪಕ್ಕದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕೂಡ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.