ರಾಯಚೂರು: ‘ಜಿಲ್ಲೆಯಲ್ಲಿ ಮನೆಗಳ್ಳತನ, ಬೈಕ್ ಕಳ್ಳತನ, ಕೊಲೆ, ಗಾಂಜಾ ಮಾರಾಟ, ಜೂಜಾಟ ಹೆಚ್ಚಿರುವ ದೂರುಗಳು ಬಂದಿರುವ ಕಾರಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.
‘ಮಾದಕ ದ್ರವ್ಯಗಳ ಮಾರಾಟ, ಜೂಜಾಟ ಹಾಗೂ ಮರಳು ಅಕ್ರಮ ಸಾಗಣೆ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಬೇಕು. ಇಲ್ಲಿಯೇ ಸ್ಪಷ್ಟ ನಿರ್ದೇಶನ ನೀಡುತ್ತೇನೆ’ ಎಂದು ನಗರದಲ್ಲಿ ಶುಕ್ರವಾರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ದಿಸೆಯಲ್ಲಿ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸುವಂತೆ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ’ ಎಂದು ಹೇಳಿದರು.
‘ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಇಲ್ಲ’: ‘ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿದರೆ ಬೇರೆ ಕಾರ್ಯಕ್ರಮಗಳಿಗೆ ಜಿಲ್ಲಾ ಕ್ರೀಡಾಂಗಣ ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡುವುದಿಲ್ಲ’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಸ್ಪಷ್ಟಪಡಿಸಿದರು.
‘ಕಲಬುರಗಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿರುವ ಕಾರಣ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಇತರೆ ಕಾರ್ಯಕ್ರಮ ಆಯೋಜಿಸಲು ತೊಡಕಾಗಿದೆ’ ಎಂದರು.
‘ಕೇಂದ್ರ ಸರ್ಕಾರಕ್ಕೆ ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರದ ಮಾಹಿತಿಯನ್ನು ಮೊದಲೇ ಕೊಡಲಾಗಿದೆ. ಕೇಂದ್ರ ಅಗತ್ಯವಿರುವ ಗೊಬ್ಬರ ಪೂರೈಕೆ ಮಾಡದಿರುವುದೇ ಸಮಸ್ಯೆಗೆ ಕಾರಣವಾಗಿದೆ’ ಎಂದು ಸಚಿವರು ತಿಳಿಸಿದರು.
‘ರಾಯಚೂರು ನಗರದಲ್ಲಿ ರಸಗೊಬ್ಬರ ಅಕ್ರಮವಾಗಿ ದಾಸ್ತಾನು ಮಾಡಿದ್ದವರ ಲೈಸನ್ಸ್ ರದ್ದುಪಡಿಸಲಾಗಿದೆ. ಅಲ್ಲದೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.
‘ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಅದೇ ಸಮುದಾಯದ ಬೇರೊಬ್ಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಅನ್ಯಾಯ ಸರಿಪಡಿಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.