ರಾಯಚೂರು: ಜಿಲ್ಲೆಯಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಮಾಡಿ, ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿಯ ಜಲನಿರ್ಮಲ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಸಮೂಹ ಮಾಧ್ಯಮ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಪ್ರಮುಖವಾಗಿ ಕೃಷಿಗೆ ಸಂಬಂಧಿಸಿದ ಯೋಜನೆಗಳ ಕುರಿತು ತಾಲ್ಲೂಕು ಮಟ್ಟದ ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಮಾಡಬೇಕು. ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ವಹಿಸಬೇಕು. ಅಲ್ಲದೆ ರೈತರ ಕೃಷಿ ಜಮೀನುಗಳಲ್ಲಿ ಬಿತ್ತನೆಗೆ ಬೇಕಾದಂತಹ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಪೂರೈಕೆಯಾಗುವಂತೆ ನಿಗಾವಹಿಸಬೇಕು. ಕೃಷಿ ಇಲಾಖೆ ಅಧಿಕಾರಿಗಳು ಪ್ರತಿದಿನ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಲ್ಲದೇ, ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಬಿತ್ತನೆ ಬೀಜ, ರಸಗೊಬ್ಬರದ ದಾಸ್ತಾನು ವಿವರ ಹಾಗೂ ದರಗಳನ್ನು ಸೂಚನಾ ಫಲಕಗಳಲ್ಲಿ ಪ್ರಚುರಪಡಿಸಬೇಕು ಎಂದು ಹೇಳಿದರು.
ಸರ್ಕಾರದಿಂದ ಕೃಷಿ ಉತ್ಪಾದನೆ ಮಟ್ಟದ ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ರೈತರಿಗೆ ದೊರಕಿಸಿಕೊಡಬೇಕು. ಅಲ್ಲದೆ ರೈತರಿಗೆ ಬೇಕು ಬೇಡಗಳನ್ನು ತಿಳಿಯಬೇಕು ತಿಳಿಯಬೇಕು ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್., ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶರಣಬಸವ ಶೆಟ್ಟಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಅಲಿ, ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ, ಕೃಷಿ ಇಲಾಖೆಯ ಜಿಲ್ಲಾ ಕಚೇರಿಯ ಸಹಾಯಕ ನಿರ್ದೇಶಕಿ ಪುಷ್ಪಲತಾ, ಕೃಷಿ ಅಧಿಕಾರಿ ತಿಮ್ಮಪ್ಪ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.