ADVERTISEMENT

ರಾಯಚೂರು: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 13:14 IST
Last Updated 3 ಜೂನ್ 2025, 13:14 IST
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಛಲವಾದಿ ನಾರಾಯಣ ಸ್ವಾಮಿ ಹಾಗೂ ಎನ್‌.ರವಿಕುಮಾರ್ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಛಲವಾದಿ ನಾರಾಯಣ ಸ್ವಾಮಿ ಹಾಗೂ ಎನ್‌.ರವಿಕುಮಾರ್ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು   

ರಾಯಚೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್‌.ರವಿಕುಮಾರ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಂತರ ಬಿಜೆಪಿ ಮುಖಂಡರ ವಿರುದ್ಧ ಘೋಷಣೆ ಕೂಗಿ ಛಲವಾದಿ ನಾರಾಯಣ ಸ್ವಾಮಿ ಹಾಗೂ ಎನ್‌.ರವಿಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಮೇಲ್ಮನೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಂವಿಧಾನ ಪದ ಬಳಸಿ ನಿಂದನೆ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದವರು ಇರಬೇಕು ಎಂದು ಹೇಳಿ ಜಿಲ್ಲಾ ದಂಡಾಧಿಕಾರಿಗೆ ಅವಮಾನ ಮಾಡಿದ್ದಾರೆ. ಇವರಿಬ್ಬರ ಹೇಳಿಕೆ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರಿಗೆ ಎರಡು ಪ್ರತ್ಯೇಕ ದೂರು ನೀಡಲಾಗಿದೆ. ರಾಜ್ಯಪಾಲರು ಬಿಜೆಪಿ ಸದಸ್ಯರು ನೀಡಿರುವ ಹೇಳಿಕೆ ಸಮರ್ಥನೀಯವಲ್ಲ ಎಂದಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ವಿಶ್ವಾಸವಿದೆ’ ಎಂದರು.

‘ಸಚಿವರನ್ನು ನಿಂದಿಸಿರುವುದು ಸಹಿಸಲಾಗದು. ನಾರಾಯಣ ಸ್ವಾಮಿ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ತೆಗೆದು ಹಾಕಬೇಕು. ಇಲ್ಲ ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಜೊತೆಗೆ ರವಿಕುಮಾ‌ರ್ ಕಲಬುರಗಿ ಜಿಲ್ಲಾಧಿಕಾರಿಗೆ ಪಾಕಿಸ್ತಾನದವರು ಎಂದಿರುವುದು ಸಂವಿಧಾನ ವಿರೋಧಿಯಾಗಿದ್ದು, ಕೂಡಲೇ ಅವರ ಪರಿಷತ್ ಸದಸ್ಯತ್ವವನ್ನು ರದ್ದು ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಮಾತನಾಡಿ, ‘ಬಿಜೆಪಿಯವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ’ ಎಂದರು.

‘ಮಲ್ಲಿಕಾರ್ಜುನ ಖರ್ಗೆಯವರ ಮನೆಯಲ್ಲಿಯೇ ಅರ್ಧ ಜೀವನ ಕಳೆದಿರುವ ಛಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ ಸೇರಿದ ನಂತರ ಊಸರವಳ್ಳಿ ತರಹ ಬಣ್ಣವನ್ನು ಬದಲಾವಣೆ ಮಾಡುವ ಮೂಲಕ ಖರ್ಗೆಯವರ ವಿರುದ್ಧ ಮಾತನಾಡುತ್ತಿದ್ದಾರೆ’ ಎಂದು ದೂರಿದರು.

‘ನಾರಾಯಣಸ್ವಾಮಿ ಕಾಂಗ್ರೆಸ್‌ನಲ್ಲಿದ್ದ ಸಂದರ್ಭದಲ್ಲಿ ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದ್ದರು. ಅದೇ ರೀತಿ ಈಗ ಕಾಂಗ್ರೆಸ್ ವಿರುದ್ಧ ಮಾತನಾಡಿ ವಿರೋಧ ಪಕ್ಷದ ಸ್ಥಾನಮಾನ ಪಡೆದುಕೊಂಡಿದ್ದಾರೆ’ ಎಂದು ಟೀಕಿಸಿದರು.

‘ಖರ್ಗೆಯವರನ್ನು ನಾಯಿಗೆ ಹೋಲಿಸಿ ಮಾತನಾಡಿರುವುದು ಖಂಡನೀಯವಾದುದ್ದು. ನಾರಾಯಣಸ್ವಾಮಿ ಜನರಿಂದ ಆಯ್ಕೆಯಾದವರಲ್ಲ. ನಾಯಕರ ಮನೆ ಬಾಗಿಲನ್ನು ಕಾದು ಸ್ಥಾನ ಪಡೆದುಕೊಂಡವರು’ ಎಂದು ಜರಿದರು.

‘ಜನರು ಗಮನಿಸಲಿ ಎನ್ನುವ ಉದ್ದೇಶದಿಂದ ಮಾತ್ರ ಮಾತನಾಡುವ ಚಾಳಿ ಬೆಳೆಸಿಕೊಂಡಿದ್ದಾರೆ. ವಿರೋಧ ಪಕ್ಷದ ಸ್ಥಾನಕ್ಕೆ ಅರ್ಹರಲ್ಲ. ಕೂಡಲೇ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಎನ್.ರವಿಕುಮಾರ್ ರಾಜಕೀಯ ರಂಗದಲ್ಲಿ ಇರುವುದಕ್ಕೆ ಅರ್ಹರಲ್ಲ. ಕೋಮುವಾದವನ್ನು ಸೃಷ್ಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಇನ್ನು ಮುಂದೆ ಅವರ ಆಟ ನಡೆಯುವುದಿಲ್ಲ. ಇವರ ಕೋಮುವಾದ ಜನತೆಗೆ ಗೊತ್ತಾಗಿದೆ’ ಎಂದರು.

ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಶಾಸಕರಾದ ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್, ಕಾಂಗ್ರೆಸ್‌ನ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಕೆ.ಶಾಂತಪ್ಪ, ಮಹ್ಮದ್ ಶಾಲಂ, ಮಹಿಳಾ ಕಾಂಗ್ರೆಸ್‌ನ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲಾ ಬೆಣ್ಣಿ, ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರ ರಜಾಕ್‌ ಉಸ್ತಾದ್ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಮಾತನಾಡಿದರು. ಕಾಂಗ್ರೆಸ್‌ನ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಪಕ್ಷದ ಪದಾಧಿಕಾರಿಗಳು ಹಾಜರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.