
ರಾಯಚೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.
2015ರಲ್ಲಿ ದ್ವಿಪಕ್ಷೀಯ ಒಪ್ಪಂದವಾದರೂ ಕೆಲ ಬೇಡಿಕೆಗಳನ್ನು ಇಂದಿಗೂ ಸಂಪೂರ್ಣವಾಗಿ ಜಾರಿಗೆ ತರಲಾಗಿಲ್ಲ. ಅದರಂತೆ ಈಗ ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರಗಳಂದು ಮಾತ್ರ ರಜೆ ಘೋಷಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಹಣಕಾಸು ಕ್ಷೇತ್ರದಲ್ಲಿ ಈಗಾಗಲೇ ಆರ್‌ಬಿಐ, ಎಲ್‌ಐಸಿ ಹಾಗೂ ಜಿಐಸಿಗಳಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ಬಂದಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಚೇರಿಗಳು ಮತ್ತು ಷೇರುಪೇಟೆಗಳು ಸಹ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಬ್ಯಾಂಕ್ ಸಿಬ್ಬಂದಿಗೆ ಮಾತ್ರ ಈ ಸೌಲಭ್ಯ ನೀಡದಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರದಿಂದ ಶುಕ್ರವಾರದವರೆಗೆ ಕೆಲಸದ ಸಮಯವನ್ನು ಸ್ವಲ್ಪ ಹೆಚ್ಚಿಸಿ ಉಳಿದ ಶನಿವಾರಗಳನ್ನು ರಜೆ ಎಂದು ಘೋಷಿಸಿದರೂ, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯ ಕಾರಣ ಗ್ರಾಹಕರಿಗೆ ಹೆಚ್ಚಿನ ತೊಂದರೆಯಾಗುವುದಿಲ್ಲ ಎಂದು ಹೇಳಿದರು.
ಒಕ್ಕೂಟದ ಸಹ ಕಾರ್ಯದರ್ಶಿ ಕುಮಾರ ಯಗ್ಗಟ್ಟಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಸಲಾವುದ್ದೀನ್, ಸೋಮಶೇಖರ, ರಾಜೇಶ ವಿ.ಜೆ, ಪವನಕುಮಾರ, ಮಲ್ಲಿಕಾರ್ಜುನ, ಗಣೇಶ, ಅಯೂಬ್ ಖಾನ್, ಶ್ರೀನಿವಾಸ್ ಸಂತೋಷ. ಬಿ, ಮಾಲಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.