
ರಾಯಚೂರು: ‘ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಿಸಿ, ರಾಜ್ಯದಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಹಾಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.
‘ಫಲಿತಾಂಶದ ಪ್ರಮಾಣ ಹೆಚ್ಚಿಸುವಲ್ಲಿ ಶಿಕ್ಷಕರ ಶ್ರಮ ಬಹಳ ಪ್ರಮುಖವಾಗಿರುತ್ತದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ವಿಶೇಷ ಗಮನಹರಿಸಿದಾಗ ಸಹಜವಾಗಿ ಉತ್ತಮ ಫಲಿತಾಂಶ ದೊರೆಯುತ್ತದೆ. ಮಕ್ಕಳ ಶೈಕ್ಷಣಿಕ, ಕೌಟುಂಬಿಕ ವಾತಾವರಣ ಸರಿಯಾಗಿಲ್ಲ ಎನ್ನುವಂಥ ಬಾಲಿಶ ಕಾರಣಗಳನ್ನು ನೀಡದೇ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ’ ಎಂದರು.
‘ಪೂರ್ವಸಿದ್ಧತಾ ಪರೀಕ್ಷೆಗಳ ಫಲಿತಾಂಶದ ಆಧಾರದ ಮೇಲೆ, ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳ ಕಡೆಗೆ ಶಿಕ್ಷಕರು ವಿಶೇಷ ಗಮನ ಹರಿಸಬೇಕು. ಶೇ 40ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳ ಮೇಲೆ ಹೆಚ್ಚಿನ ನಿಗಾ ವಹಿಸಿ, ಅಲ್ಲಿನ ಬೋಧನಾ ಕ್ರಮಗಳಲ್ಲಿ ಸುಧಾರಣೆ ತರಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಮಾತನಾಡಿ, ‘ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸನ್ನದ್ಧಗೊಳಿಸಲು ಪೂರಕ ಬೋಧನೆ ಮತ್ತು ಪುನರಾವರ್ತನೆಗೆ ಆದ್ಯತೆ ನೀಡಬೇಕು. ಹಿಂದುಳಿದ ವಿದ್ಯಾರ್ಥಿಗಳನ್ನು ಶಿಕ್ಷಕರು ದತ್ತು ಪಡೆದು ವೈಯಕ್ತಿಕ ಮಾರ್ಗದರ್ಶನ ನೀಡುವುದರ ಜೊತೆಗೆ ಪರೀಕ್ಷಾ ದೃಷ್ಟಿಯಿಂದ ಪ್ರಮುಖವಾಗಿರುವ ವಿಷಯಗಳ ಬಗ್ಗೆ ಹೆಚ್ಚಿನ ತರಬೇತಿ ನೀಡಬೇಕು’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಆರ್‌ಪಿ, ಬಿಆರ್‌ಪಿ ಹಾಗೂ ವಿವಿಧ ಶಾಲೆಗಳು ಮುಖ್ಯಗುರುಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.