ರಾಯಚೂರು: ನಗರದ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಗುರುವಾರ ರಾತ್ರಿ ಪೊಲೀಸ್ ಅಧಿಕಾರಿಗಳು ನಗರ ಸಂಚಾರ ನಡೆಸಿದರು.
ಗಸ್ತಿನಲ್ಲಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಭೇಟಿ ಮಾಡಿ ವೀಕ್ಷಿಸಿದರು.
ರಾತ್ರಿ ಸಮಯದಲ್ಲಿ ಗಸ್ತು ಬೀಟ್‌ನಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಸಂಚಾರ ದಟ್ಟಣೆ ಇರುವ ಪ್ರಮುಖ ರಸ್ತೆಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ, ವಾಣಿಜ್ಯ ಪ್ರದೇಶ ಹಾಗೂ ಸಂವೇದನಾಶೀಲ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆಯಿಂದ ಪೆಟ್ರೋಲಿಂಗ್ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಮಾಜ ವಿರೋಧಿ ಚಟುವಟಿಕೆಗಳು ನಡೆಯದಂತೆ ಹಾಗೂ ಅಪರಾಧಗಳ ನಿಯಂತ್ರಣಕ್ಕಾಗಿ ಗಸ್ತು ಅಧಿಕಾರಿಗಳು ಸದಾ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಲಾಯಿತು. ತುರ್ತು ಸಂದರ್ಭಗಳಲ್ಲಿ ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಲಾಯಿತು.
ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇಂಥ ಗಸ್ತು ಪರಿಶೀಲನೆಗಳನ್ನು ನಿಯಮಿತವಾಗಿ ಮುಂದುವರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.