ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಫೆ.5 ರಿಂದ ಫೆ.7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಮತ್ತೊಂದು ಹಂತದ ಸಿದ್ಧತಾ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಧ್ಯಕ್ಷತೆಯಲ್ಲಿ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
‘ಉತ್ಸವದ ಯಶಸ್ವಿಗಾಗಿಯೇ ರಚಿಸಲಾಗಿರುವ ಸಮಿತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಸಿದ್ಧತಾ ಕಾರ್ಯದ ವೇಗ ಹೆಚ್ಚಿಸಿಕೊಳ್ಳಬೇಕು’ ಎಂದು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ಉತ್ಸವದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಖ್ಯಾತಿಯ ಕಲಾವಿದರು ಆಗಮಿಸಿ ಕಾರ್ಯಕ್ರಮ ನೀಡುತ್ತಿರುವ ಹಿನ್ನೆಲೆಯಲ್ಲಿ ಸೇರುವ ಜನಸಂದಣಿ ನಿಯಂತ್ರಣದ ಬಗ್ಗೆ ಪೊಲೀಸ್ ಇಲಾಖೆಯು ಈಗಲೇ ರೂಪುರೇಷಗಳನ್ನು ಸಿದ್ಧಪಡಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅವಘಡಗಳು ನಡೆಯದಂತೆ ಜಿಲ್ಲಾಡಳಿತವು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.
‘ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದಲೂ ಜನರು ಉತ್ಸವಕ್ಕೆ ಬಂದು ಹೋಗಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯ ಕಾರ್ಯಯೋಜನೆ ರೂಪಿಸಬೇಕು’ ಎಂದು ಸಚಿವರು ಸಲಹೆ ಮಾಡಿದರು.
‘ಈಗಾಗಲೇ ಶೇ.80ರಷ್ಟು ಉತ್ಸವದ ಸಿದ್ಧತೆಯ ಕಾರ್ಯ ನಡೆದಿದೆ. ಬಾಕಿ ಕಾರ್ಯವನ್ನು ಸಹ ಬೇಗನೆ ರ್ಪೂಗೊಳಿಸಲಾಗುವುದು. ಉತ್ಸವ ಹಿನ್ನೆಲೆಯಲ್ಲಿ ಬೇರೆ ಬೇರೆ ಸ್ಪರ್ಧೆಗಳು, ಕಾರ್ಯಕ್ರಮಗಳು ಪ್ರತಿ ದಿನ ನಡೆಯುತ್ತಿವೆ. ಈ ಮೂಲಕವು ಸಹ ಉತ್ಸವದ ಬಗ್ಗೆ ಜನತೆಗೆ ಮಾಹಿತಿ ಕೊಡುತ್ತಿದ್ದೇವೆ’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಸಚಿವರಿಗೆ ಮಾಹಿತಿ ನೀಡಿದರು.
ಶಾಸಕ ಬಸನಗೌಡ ದದ್ಧಲ್, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಣ್ಣ ಬಿರಾದಾರ, ತಹಶೀಲ್ದಾರ್ ಸುರೇಶ ವರ್ಮಾ, 18 ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.