
ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಜಿಲ್ಲಾಡಳಿತ ರೂಪಿಸಿರುವ ಜ್ಯೋತಿ ರಥಯಾತ್ರೆಗೆ ನಗರದ ಕರ್ನಾಟಕ ಸಂಘದ ಆವರಣದಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಈ ರಥಯಾತ್ರೆಗೆ ಜಿಲ್ಲಾಧಿಕಾರಿ ನಿತೀಶ್ ಕೆ ಚಾಲನೆ ನೀಡಿದರು.
ಜಿಲ್ಲಾಡಳಿತದ ಸೂಚನೆ ಹಿನ್ನೆಲೆಯಲ್ಲಿ ರಜೆ ದಿನವಾದ ಭಾನುವಾರವೂ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯ ಸಿಬ್ಬಂದಿಯೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೂವು, ತಳಿರು ತೋರಣಗಳಿಂದ ಶೃಂಗರಿಸಿದ್ದ ರಥವು ಗಮನ ಸೆಳೆಯಿತು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಒಂದೇ ಬಣ್ಣದ ಸೀರೆ ಧರಿಸಿ ಮೆರವಣಿಗೆ ಕಳೆ ಹೆಚ್ಚಿಸಿದರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಜ್ಯೋತಿ ಯಾತ್ರೆಯು ನಗರದ ಬಂಗಾರ ಬಜಾರ್, ಸದರ್ ಬಜಾರ್, ಹಳೆ ನಗರಸಭೆ ಕಚೇರಿ ಮುಂಭಾಗ, ಕೇಂದ್ರ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಬಂದಿತು. ನಂತರ ರಥ ಮಾನ್ವಿಗೆ ಪ್ರಯಾಣ ಬೆಳಿಸಿತು.
ಸಿಂಧನೂರ, ಮಸ್ಕಿ, ಲಿಂಗಸುಗೂರು, ಕವಿತಾಳ, ದೇವದುರ್ಗ, ಗಬ್ಬೂರ, ಅರಕೇರಾ, ಸಿರವಾರ ಸೇರಿದಂತೆ ಫೆ.5ರವರೆಗೆ ಜಿಲ್ಲೆಯಾದ್ಯಂತ ಸಂಚರಿಸಲಿದೆ.
ರಾಯಚೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನಕಿಶೋರ ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣ ಶಾವಂತಗೇರಿ, ಉಪ ಆಯುಕ್ಷೆ ಸಂತೋಷ ರಾಣಿ, ಜಿಲ್ಲಾಡಿಎಚ್‌ಒ ಡಾ.ಸುರೇಂದ್ರ ಬಾಬು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್ ಚವ್ಹಾಣ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧು ಆರ್. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರಾದ ರವಿ ಬೋಸರಾಜು, ಜಯವಂತರಾವ್ ಪತಂಗೆ, ಕೆ.ಶಾಂತಪ್ಪ, ರವಿ ಜಲ್ದಾರ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.