ADVERTISEMENT

ಯುವನಿಧಿ ಫಲಾನುಭವಿಗಳಿಗೆ ಉದ್ಯೋಗ ಭಾಗ್ಯ: ಉದ್ಯೋಗ ಮೇಳಕ್ಕೆ ಸಚಿವ ಬೋಸರಾಜು ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 4:04 IST
Last Updated 7 ಫೆಬ್ರುವರಿ 2026, 4:04 IST
ರಾಯಚೂರು ನಗರದಲ್ಲಿ ಜಿಲ್ಲಾ ಉತ್ಸವದ ಪ್ರಯುಕ್ತ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮೇಳದಲ್ಲಿ ಹೆಸರು ನೋಂದಾಯಿಸಿಕೊಳ್ಳುತ್ತಿರುವ ಅಭ್ಯರ್ಥಿಗಳು
ರಾಯಚೂರು ನಗರದಲ್ಲಿ ಜಿಲ್ಲಾ ಉತ್ಸವದ ಪ್ರಯುಕ್ತ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮೇಳದಲ್ಲಿ ಹೆಸರು ನೋಂದಾಯಿಸಿಕೊಳ್ಳುತ್ತಿರುವ ಅಭ್ಯರ್ಥಿಗಳು   

ರಾಯಚೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಯ ಫಲಾನುಭವಿಗಳಿಗೆ ಉದ್ಯೋಗ ಭಾಗ್ಯ ಕಲ್ಪಿಸುವಲ್ಲಿ ಜಿಲ್ಲಾ ಉತ್ಸವದ ಪ್ರಯುಕ್ತ ಶುಕ್ರವಾರ ನಡೆದ ಉದ್ಯೋಗ ಮೇಳ ನೆರವಾಯಿತು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕೌಶಲ್ಯ ಮಿಷನ್‌ನ
ಸಹಯೋಗದಲ್ಲಿ ಡಿಡಿಯು-ಜಿಕೆವೈ ಯೋಜನೆ ಅಡಿಯಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು.

ಈ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಫೆ.4ರ ಒಳಗೆ ಆಸಕ್ತ ಉದ್ಯೋಗಾಂಕ್ಷಿಗಳಿಂದ ಆನ್‌ಲೈನ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ಫೆ.4ರ ಒಳಗೆ ಒಟ್ಟು 14,901 ಅಭ್ಯರ್ಥಿಗಳ ಪೈಕಿ 8,027 ಪುರುಷ, 6,874 ಮಹಿಳಾ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಇವರಲ್ಲಿ 5,245 ಜನ ಯುವನಿಧಿ ಯೋಜನೆಯ ಫಲಾನುಭವಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶರಣಬಸವರಾಜ ತಿಳಿಸಿದರು.

ADVERTISEMENT

ಶುಕ್ರವಾರ ನೇರವಾಗಿ ಮೇಳಕ್ಕೆ ಬಂದ ನೂರಾರು ಅಭ್ಯರ್ಥಿಗಳಿಗೂ ನೋಂದಣಿಗೆ ಅವಕಾಶ ನೀಡಲಾಯಿತು.

ಈ ಮೇಳದಲ್ಲಿ ಕೃಷಿ, ಶಿಕ್ಷಣ, ಹಣಕಾಸು, ಬ್ಯಾಂಕಿಂಗ್, ಆಡಳಿತ, ಆರೋಗ್ಯ ಸೇವೆ, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಉತ್ಪಾದನೆಯ 60ಕ್ಕೂ ಅಧಿಕ ಖಾಸಗಿ ಕಂಪನಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ವಿವಿಧ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿರುವ ಅಭ್ಯರ್ಥಿಗಳ ಸಂದರ್ಶನ ನಡೆಸಿದರು.

ಶನಿವಾರ ಜಿಲ್ಲಾ ಉತ್ಸವದ ಅಂಗವಾಗಿ ನಡೆಯುವ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಮಾವೇಶದಲ್ಲಿ ಸಂದರ್ಶನದಲ್ಲಿ ಉದ್ಯೋಗಕ್ಕೆ ಆಯ್ಕೆಯಾದ ಯುವನಿಧಿ ಫಲಾನುಭವಿಗಳಿಗೆ ಸನ್ಮಾನ ಹಾಗೂ ನೇಮಕಾತಿ ಪತ್ರ ವಿತರಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಉದ್ಯೋಗ ಮೇಳವನ್ನು ಉದ್ಘಾಟಿಸಿದರು. ಸಂಸದ ಜಿ.ಕುಮಾರ ನಾಯಕ, ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪವನ್ ಪಾಟೀಲ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಜಿ.ಪಂ ಸಿಇಒ ಈಶ್ವರಕುಮಾರ ಕಂದೂ ಉಪಸ್ಥಿತರಿದ್ದರು.

ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶ ಮತ್ತು ಕಂಪನಿಗಳ ಸಿಎಸ್‌ಆರ್ ಅನುದಾನವನ್ನು ಸ್ಥಳೀಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವ್ಯಯಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ
ಎನ್.ಎಸ್.ಬೋಸರಾಜು ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.