ADVERTISEMENT

ಹತ್ಯೆ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 13:15 IST
Last Updated 11 ಅಕ್ಟೋಬರ್ 2021, 13:15 IST
ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ರಾಯಚೂರು ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು
ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ರಾಯಚೂರು ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಚೌಡೇಶ್ವರಾಳ ಗ್ರಾಮದ ಮಾದಿಗ ಸಮುದಾಯದ ಮಹಿಳೆ ಪಾಲಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪೆಟ್ರೊಲ್ ಸುರಿದು ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ರಾಯಚೂರು ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತದ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಆರೋಪಿಗೆ ಶಿಕ್ಷೆ ನೀಡಿ ಸಂತ್ರಸ್ಥ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು ಮತ್ತು ಸೂಕ್ತ ರಕ್ಷಣೆ ಒದಗಿಸಬೇಕು. ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅವೈಜ್ಞಾನಿಕ ವರದಿ ಎಂದು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಸಚಿವ ಪ್ರಭು ಚವಾಣ್‌ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಲಂಬಾಣಿ ಜನಾಂಗವನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದುಹಾಕಬೇಕು. ರಾಜ್ಯದಲ್ಲಿ ದಲಿತರ ಮೇಲೆ ನಿರಂತರ ಕೊಲೆ, ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಪ್ರಕರಣಗಳು ನಡೆಯುತ್ತಿದ್ದು, ಕೂಡಲೇ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟರ ಕುಂದು ಕೊರತೆ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಎ.ಬಾಲಸ್ವಾಮಿ ಕೊಡ್ಲಿ, ತಾಲ್ಲೂಕು ಘಟಕದ ಅಧ್ಯಕ್ಷ ಪಿ. ಯಲ್ಲಪ್ಪ, ಮುಖಂಡ ರವೀಂದ್ರ ಜಲ್ದಾರ್, ಎಂ.ಸುಭಾಷ, ಜನಾರ್ದನ ಹಳ್ಳಿಬೆಂಚಿ, ಆರ್.ಹನುಮಂತ, ಜೆ.ಮಾರೆಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.