ರಾಯಚೂರು: ‘ಬಡ, ಹಿಂದುಳಿದ, ಪರಿಶಿಷ್ಟರು, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು ನೀಡಿ ಹಾಸ್ಟೆಲ್‌ಗಳನ್ನು ತೆರೆಯಲಾಗಿದ್ದು, ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಹೇಳಿದರು.
ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಿ-ಗ್ರೂಪ್ ಸಿಬ್ಬಂದಿಗೆ ಅಡುಗೆ ತಯಾರಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡುವ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಮುಖ್ಯವಾಹಿನಿಯಿಂದ ಹೊರಗಿರುವ ಸಮಾಜದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಹಾಸ್ಟೆಲ್‍ಗಳ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ವಸತಿನಿಲಯಗಳ ವಾರ್ಡನ್‍ಗಳು ಮಕ್ಕಳಿಗೆ ಉತ್ತಮ ಗುಣಮಟ್ಟದ ಊಟ ಒದಗಿಸಬೇಕು. ಕೆಲವು ದಿನಗಳ ಹಿಂದೆ ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು. ಅಂಥ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.
‘ಅಡುಗೆ ತಯಾರಿಸುವ ಸಿಬ್ಬಂದಿ, ವಾರ್ಡನ್‍ಗಳು, ತಾಲ್ಲೂಕುಮಟ್ಟದ ಅಧಿಕಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಅದಕ್ಕಾಗಿ ಈ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ನೀಡಿದ ಸೂಚನೆಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತ್ತದ್ದಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ್, ವಿವಿಧ ವಸತಿನಿಲಯಗಳ ವಾರ್ಡನ್‍ಗಳು, ಪ್ರಾಂಶುಪಾಲರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.