ADVERTISEMENT

ಲಿಂಗಸುಗೂರು | ‘ದೌರ್ಜನ್ಯ ಪ್ರಕರಣ: ತ್ವರಿತ ಸ್ಪಂದಿಸಿ’

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 14:00 IST
Last Updated 28 ಜೂನ್ 2025, 14:00 IST
ಲಿಂಗಸುಗೂರಿನಲ್ಲಿ ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ನಡಯಿತು
ಲಿಂಗಸುಗೂರಿನಲ್ಲಿ ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ನಡಯಿತು   

ಲಿಂಗಸುಗೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಎಸಗಿದ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು’ ಎಂದು ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಶುಕ್ರವಾರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಸಮಿತಿ ಮತ್ತು ಜಾಡಮಾಲಿ ಪದ್ಧತಿ ನಿರ್ಮೂಲನೆ ಹಾಗೂ ಪುನರ್ವಸತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‌‘ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಆರ್ಥಿಕ ನೆರವು ಕಲ್ಪಿಸುವಲ್ಲಿ ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಎಲ್ಲಿ ಸಶ್ಮಾನದ ಜಾಗದ ಕೊರತೆ ಇದೆ ಎಂಬುದನ್ನು ಗುರುತಿಸಿ ಅದಕ್ಕೆ ಕೂಡಲೇ ಸ್ಪಂದಿಸಬೇಕು. ದೌರ್ಜನ್ಯ ನಡೆಯದಂತೆ ಅರಿವು ಮೂಡಿಸುವ ಕಾರ್ಯ ಮಾಡಬೇಕು’ ಎಂದು ಸೂಚಿಸಿದರು.

ADVERTISEMENT

‘ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಪೌರ ಕಾರ್ಮಿಕರಿಗೆ ಸಕಾಲಕ್ಕೆ ವೇತನ ನೀಡಿ ಅವರ ಆರೋಗ್ಯ ತಪಾಸಣೆ, ಸುರಕ್ಷತೆಗೆ ಕಾಳಜಿ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಲಿಂಗಸುಗೂರು, ಸಿಂಧನೂರು, ಮಸ್ಕಿ ತಾಲ್ಲೂಕುಗಳ ತಹಶೀಲ್ದಾರ್‌, ತಾಲ್ಲೂಕು ಪಂಚಾಯಿತಿ ಇಒಗಳು, ಡಿವೈಎಸ್ಪಿಗಳು, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ಸಮಾಜ ಕಲ್ಯಾಣಾಧಿಕಾರಿಗಳು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.