ADVERTISEMENT

ಮಂತ್ರಾಲಯ: ಆ.21 ರಿಂದ ರಾಯರ ಆರಾಧನಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 9:17 IST
Last Updated 19 ಆಗಸ್ಟ್ 2021, 9:17 IST
ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ
ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ   

ರಾಯಚೂರು: ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನಾ‌ ಮಹೋತ್ಸವವನ್ನು ಆಗಸ್ಟ್‌ 21 ರಿಂದ 28 ರವರೆಗೂ ಆಚರಿಸಲಾಗುವುದು ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಾಧನೆಯನ್ನು ವಿಜೃಂಭಣೆಯಿಂದ ಆಚರಿಸುವ ಬಯಕೆ ಇದ್ದರೂ, ಕೊರೊನಾ ಸೋಂಕು ತಡೆಯಬೇಕಿದೆ. ಹೀಗಾಗಿ ಸಾಂಪ್ರದಾಯಿಕ ಪೂಜೆ ಪುನಸ್ಕಾರಗಳನ್ನು ಮಾತ್ರ ನೆರವೇರಿಸಲಾಗುವುದು ಎಂದು ಹೇಳಿದರು.

ಆಂಧ್ರದ ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಸೂಚನೆಗಳನ್ನು ಆಧರಿಸಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಆಂಧ್ರ ಪ್ರದೇಶ ರಾಜ್ಯದಲ್ಲಿ ಕೊರೊನಾ ಉಪದೃವ ಅಷ್ಟೊಂದಿಲ್ಲ. ಹೀಗಾಗಿ ಆಗಸ್ಟ್ 21 ರಿಂದ ಸಪ್ತರಾತ್ರೋತ್ಸವ ಕಾರ್ಯಕ್ರಮಗಳು ಆರಂಭವಾಗಲಿವೆ‌. ಮಹೋತ್ಸವದಲ್ಲಿ ಪಾಲ್ಗೊಳ್ಳುವ ಪ್ರತಿ ಭಕ್ತರಿಗೂ ಸ್ಯಾನಿಟೈಜ್ ಮಾಡಲು ಟನಲ್‍‌ಗಳನ್ನು ಮಾಡಲಾಗುತ್ತಿದೆ. ಕೋವಿಡ್ ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡುವ ಯಂತ್ರ ಅಳವಡಿಸಲಾಗುತ್ತದೆ. ಮಠ, ನದಿತೀರ, ಶೌಚಾಲಯ ಸೇರಿದಂತೆ ಎಲ್ಲ ಕಡೆಗೂ ಸ್ಯಾನಿಟೈಜ್ ಮಾಡಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಭಕ್ತರಿಗೆ ಶುದ್ಧ ಕುಡಿಯುವ ನೀರು, ವಸತಿ ವ್ಯವಸ್ಥೆ, ನದಿತೀರದಲ್ಲಿ ಸ್ನಾನ ಮಾಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ದಿನಕ್ಕೆ ಎರಡು ಬಾರಿ ಉಚಿತ ಅನ್ನಪ್ರಸಾದ ವ್ಯವಸ್ಥೆ ಇದೆ. ಎಂದಿನಂತೆ ಪ್ರಾತಃಕಾಲದಲ್ಲಿ ಏಳು ದಿನವೂ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಲಿವೆ. ವಿಧ್ವಾಂಸರ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ರಾಘವೇಂದ್ರ ಅನುಗ್ರಹ ಪ್ರಶಸ್ತಿಗಳನ್ನು ಪಟ್ಟಾಭಿಷೇಕ ಸಂದರ್ಭದಲ್ಲಿ ನೀಡಲು ಮುಂದೂಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.