ADVERTISEMENT

ಕೋವಿಡ್ ಸಂಕಷ್ಟಕ್ಕೆ ಸ್ಪಂದಿಸಲು ಸಿದ್ಧ-ದತ್ತಾತ್ರೇಯ ಪಾಟೀಲ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ

​ಪ್ರಜಾವಾಣಿ ವಾರ್ತೆ
Published 13 ಮೇ 2021, 4:45 IST
Last Updated 13 ಮೇ 2021, 4:45 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ದತ್ತಾತ್ರೇಯ ಪಾಟೀಲ ಅವರು ಕೋವಿಡ್ ನಿರ್ವಹಣೆ ಕುರಿತು ಬುಧವಾರ ಸಭೆ ನಡೆಸಿದರು
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ದತ್ತಾತ್ರೇಯ ಪಾಟೀಲ ಅವರು ಕೋವಿಡ್ ನಿರ್ವಹಣೆ ಕುರಿತು ಬುಧವಾರ ಸಭೆ ನಡೆಸಿದರು   

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯನ್ನು ನಿಯಂತ್ರಿಸಲು ಹಾಗೂ ಸೋಂಕಿತರ ಚಿಕಿತ್ಸೆಗೆ ಬೇಕಾದ ಅಗತ್ಯ ನೆರವು ಒದಗಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಿದ್ಧವಿದೆ ಎಂದು ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಗೆ ಅತಿಮುಖ್ಯವಾಗಿ ಐ.ಸಿ.ಯು ಬೆಡ್‌ಗಳು, ಆಮ್ಲಜನಕ, ವೆಂಟಿಲೇಟರ್ ಇನ್ನಿತರೆ ಅಗತ್ಯ ಸಲಕರಣೆಗಳನ್ನು ಖರೀದಿಸಲು ಜಿಲ್ಲಾಡಳಿತದ ಮುಖಾಂತರ ಆರೋಗ್ಯ ಇಲಾಖೆ ಪ್ರಸ್ತಾವ ಸಲ್ಲಿಸಿದಲ್ಲಿ ಮೂರು ದಿನಗಳಲ್ಲಿ ಸೌಕರ್ಯಗಳನ್ನು ಒದಗಿಸಲು ಮಂಡಳಿ ಸಿದ್ಧವಿದೆ ಎಂದು ಅವರು ಹೇಳಿದರು.

ADVERTISEMENT

ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆಗಾಗಿ ಅಗತ್ಯವಿರುವ ಎಲ್ಲ ಔಷಧಿಗಳನ್ನು ಬಳಕೆ ಮಾಡಿಕೊಳ್ಳಬೇಕು. ರಿಮ್ಸ್ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಶೀಘ್ರ ಕಾರ್ಯಾರಂಭ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ ಪೈಕಿ ಪ್ರತ್ಯೇಕ ಮೂರು ಜಿಲ್ಲೆಗಳಲ್ಲಿ 40 ಟನ್ ಸಾಮರ್ಥ್ಯ ಇರುವ ಆಮ್ಲಜನಕ ಸರಬರಾಜು ಮಾಡುವ ಟ್ಯಾಂಕರ್‌ ಖರೀದಿಸುವ ಕುರಿತು ಚರ್ಚಿಸುವಂತೆ ಸೂಚಿಸಿದರು.

ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಅನುಗುಣವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕ್ರಿಯಾ ಯೋಜನೆ ತಯಾರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕ ಶಿವರಾಜ ಪಾಟೀಲ್ ಮಾತನಾಡಿ, ಜಿಲ್ಲೆಯ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಐ.ಸಿ.ಯು ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಅದಕ್ಕಾಗಿ ರಿಮ್ಸ್ ಮತ್ತು ಒಪೆಕ್ ಆಸ್ಪತ್ರೆಯಲ್ಲಿ ಕೂಡಲೇ 60 ರಿಂದ 80 ಐಸಿಯು ಹಾಸಿಗೆಗಳನ್ನು ಪ್ರಾರಂಭಿಸಲು ಬೇಕಾಗುವ ಮೂಲಸೌಕರ್ಯಗಳನ್ನು ಪರಿಶೀಲಿಸುವಂತೆ ರಿಮ್ಸ್ ನಿರ್ದೇಶಕರಿಗೆ ತಿಳಿಸಿದರು.

ರಿಮ್ಸ್ ಆಸ್ಪತ್ರೆಯಲ್ಲಿ ತಾತ್ಕಾಲಿವಾಗಿ 20 ಐಸಿಯು ಹಾಸಿಗೆಗಳನ್ನು ಮುಂದಿನ ಎರಡು ದಿನದೊಳಗೆ ಆರಂಭಿಸಬೇಕು. ಇದಕ್ಕೆ ಬೇಕಾಗುವ ಸಲಕರಣೆಗಳನ್ನು ಖರೀದಿಸಲು ಹೈದರಾಬಾದ್‌ನಲ್ಲಿ ಸಂಬಂಧಿಸಿದ ಕಂಪನಿ ಜೊತೆ ಮಾತುಕತೆ ನಡೆಸುವಂತೆ ಸಲಹೆ
ನೀಡಿದರು.

ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಚ್. ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.