ADVERTISEMENT

ಅ.15 ರಂದು ಅರಕೇರಾದಲ್ಲಿ ಕಂದಾಯ ಸಚಿವ ವಾಸ್ತವ್ಯ

ಗ್ರಾಮದಲ್ಲಿ ಪೂರ್ವತಯಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಎಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 12:58 IST
Last Updated 21 ಸೆಪ್ಟೆಂಬರ್ 2022, 12:58 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್‌.ದುರುಗೇಶ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಪೂರ್ವತಯಾರಿ ಸಭೆಯನ್ನು ಬುಧವಾರ ನಡೆಸಿದರು.
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್‌.ದುರುಗೇಶ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಪೂರ್ವತಯಾರಿ ಸಭೆಯನ್ನು ಬುಧವಾರ ನಡೆಸಿದರು.   

ರಾಯಚೂರು: ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಇದೇ ಅಕ್ಟೋಬರ್ 15ರಂದು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಹೂಡಲಿದ್ದು, ಗ್ರಾಮದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕ್ಟೋಬರ್‌ 15ರಂದು ಜಿಲ್ಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಮುಂದಿನ ತಿಂಗಳ ಮೂರನೇ ಶನಿವಾರ ಅರಕೇರಾ ಗ್ರಾಮದಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ಅರಕೇರಾ ಗ್ರಾಮದಲ್ಲಿ ಮೂಲ ಸಮಸ್ಯೆಗಳಾದ ಕುಡಿಯುವ ನೀರಿನ ಸಮಸ್ಯೆ, ಸಮುದಾಯ ಭವನ, ಅಂಗನವಾಡಿ ಕಟ್ಟಡ ಸೇರಿದಂತೆ ಇತರೆ ಸಮಸ್ಯೆಗಳನ್ನು ಆಲಿಸಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಅಂದು ಅರಕೇರಾ ಗ್ರಾಮದಲ್ಲಿ ಸಚಿವರ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ತಮ್ಮ ಯೋಜನೆಗಳ ಬಗ್ಗೆ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಳಿಗೆಗಳನ್ನು ಆರಂಭಿಸಿ ಸಾರ್ವಜನಿಕರಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿಬೇಕು ಎಂದು ತಿಳಿಸಿದರು.

ಗ್ರಾಮ ವಾಸ್ತವ್ಯದಲ್ಲಿ ಗ್ರಾಮದ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು. ಆಧಾರ್ ಕಾರ್ಡ್ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಹಬ್ಬದ ವಾತಾವರಣ ಸೃಷ್ಟಿಸಿ: ಕಂದಾಯ ಸಚಿವರ ಭೇಟಿ ಹಿನ್ನಲೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಬೀಡುಬಿಟ್ಟು ಸರಿಯಾದ ವ್ಯವಸ್ಥೆಯನ್ನು ಕೈಗೊಂಡು ಗ್ರಾಮದಲ್ಲಿ ಹಬ್ಬದ ವಾತಾವರಣವನ್ನು ಅಧಿಕಾರಿಗಳು ನಿರ್ಮಾಣ ಮಾಡಬೇಕು. ಗ್ರಾಮಸ್ಥರು ಹಾಗೂ ಹೆಣ್ಣು ಮಕ್ಕಳು ಪೂರ್ಣ ಕುಂಭದೊಂದಿಗೆ ಸಚಿವರನ್ನು ಬರ ಮಾಡಿಕೊಳ್ಳುವರು. ಸಚಿವರು ಜನರ ಕುಂದು-ಕೊರತೆಗಳನ್ನು ಆಲಿಸಲಿದ್ದಾರೆ. ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ 100 ರಷ್ಟನ್ನೂ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಉಪವಿಭಾಗಾಧಿಕಾರಿ ರಜನಿಕಾಂತ್, ಭೂದಾಖಲೆಗಳ ಕಚೇರಿಯ ಉಪನಿರ್ದೇಶಕಿ ರೇಷ್ಮಾ ಪಾಟೀಲ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶರಣಬಸವ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಂದ್ರ ಜಲ್ದಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶರಣಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ವಿ.ನಾಯಕ, ಕಾರ್ಮಿಕ ಇಲಾಖೆ ಅಧಿಕಾರಿ ಆರ್.ವೆಂಕಟರಾಮನಪ್ಪ ಸೇರಿದಂತೆ ವಿವಿಧ ಇಲಾಖೆಯ ಮುಖ್ಯಸ್ಥರು ಸಭೆಯಲ್ಲಿ ಇದ್ದರು.

ಆಯಾ ಇಲಾಖೆಗಳ ವೇದಿಕೆ ಅವರಣದಲ್ಲಿ ನಿರ್ಮಿಸಿರುವ ಮಳಿಗೆಗಳಲ್ಲಿ ಇಲಾಖೆಯ ಮಾಹಿತಿಯೊಂದಿಗೆ ಸಿಬ್ಬಂದಿಯನ್ನು ನಿಯೋಜಿನೆ ಮಾಡಬೇಕು. ಇಲಾಖೆಯಿಂದ ನೀಡುತ್ತಿರುವ ಸವಲತ್ತುಗಳ ಕುರಿತು ಬ್ಯಾನರ್‌ಗಳನ್ನು ಅಳವಡಿಸಬೇಕು. ಮಳಿಗೆಗಳಲ್ಲಿ ಅಗತ್ಯ ವಸ್ತು ಪ್ರದರ್ಶನ, ಕರ ಪತ್ರಗಳ ಮಾಹಿತಿ ಪುಸ್ತಕದ ವ್ಯವಸ್ಥೆ, ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ವೇದಿಕೆಯ ಮೇಲೆ ಪ್ರಮಾಣ ಪತ್ರ ವಿತರಿಸುವ ಕಾರ್ಯ ನಿರ್ವಹಣೆಗೆ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು. ನಿಯೋಜನೆಗೊಂಡ ಅಧಿಕಾರಿಗಳನ್ನು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.