ADVERTISEMENT

ಕಡತ ತ್ವರಿತ ವಿಲೇವಾರಿಗೊಳಿಸಿ: ಡಿಸಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 13:18 IST
Last Updated 30 ನವೆಂಬರ್ 2020, 13:18 IST
ಆರ್‌.ವೆಂಕಟೇಶಕುಮಾರ್‌
ಆರ್‌.ವೆಂಕಟೇಶಕುಮಾರ್‌   

ರಾಯಚೂರು: ಕಡತಗಳನ್ನು ತ್ವರಿತಗತಿಯಲ್ಲಿ ಪರಿಶೀಲಿಸಿ ವಿಲೇವಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಕಾಲ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾಲಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಕಡತ ನಿರ್ವಹಣಾ ಸಿಬ್ಬಂದಿ ಹಾಗೂ ಶಿರಸ್ತೆದಾರರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು. ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಅರ್ಜಿದಾರರು ಸಲ್ಲಿಸುವ ದೂರು ಮತ್ತು ಕಡತಗಳನ್ನು ಶೀಘ್ರ ವಿಲೇವಾರಿ ಮಾಡಿ ಅವರಿಗೆ ನ್ಯಾಯ ಒದಗಿಸಬೇಕು. ಕಡತಗಳನ್ನು ಕಚೇರಿಯಲ್ಲಿ ಸುಭದ್ರವಾಗಿ ಇರಿಸಬೇಕು. ಪ್ರಮುಖವಾಗಿ ಹೈಕೋರ್ಟ್‍ನಿಂದ ಬರುವ ಆದೇಶ ಪ್ರತಿಗಳನ್ನು ಸಂಬಂಧಿಸಿದ ಅಧಿಕಾರಿಗೆ ಕೂಡಲೇ ಒದಗಿಸಬೇಕು. ಬಾಕಿಯಿರುವ ಎಲ್ಲ ಕಡತಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ಸಕಾಲ ಸಪ್ತಾಹವು ಡಿಸೆಂಬರ್ 5ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು.

ADVERTISEMENT

ಎಲ್ಲ ಕಡತಗಳನ್ನು ಶೀಘ್ರ ಪರಿಶೀಲಿಸಿ ವಿಲೇವಾರಿ ಮಾಡಬೇಕು. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಕಡತಗಳನ್ನು ವಿಲೇವಾರಿ ಮಾಡಬೇಕಾಗಿದೆ. ಕಡತಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಇದಲ್ಲಿದ್ದಲ್ಲೀ ಸಂಬಂಧಿಸಿದವರನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಚ್. ದುರಗೇಶ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಆಹಾರ ಮತ್ತು ನಾಗರೀಕ ಸರಬಾರಜು ಇಲಾಖೆಯ ಉಪನಿರ್ದೇಶಕ ಅರುಣ ಕುಮಾರ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.