ರಾಯಚೂರು: ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. 6200 ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆ ಖಂಡನೀಯ ಎಂದು ರಾಜ್ಯ ಕಾರ್ಯಕಾರಿ ಸದಸ್ಯ ಕಲ್ಯಾಣಕುಮಾರ ಆಕ್ರೋಶ ಹೊರಹಾಕಿದರು.
ಇಲ್ಲಿಯ ರೈಲ್ವೆ ನಿಲ್ದಾಣದ ಬಳಿ ಬುಧವಾರ ಆಯೋಜಿಸಿದ್ದ ಸಹಿ ಸಂಗ್ರಹಣೆ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಸದ್ದು, ಗದ್ದಲ ವಿಲ್ಲದೆ ಈ ಶೈಕ್ಷಣಿಕ ವರ್ಷ 473 ಖಾಸಗಿ ಶಾಲೆಗಳಿಗೆ ಅನುಮತಿ ನೀಡಿ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದು ಆರೋಪ ಮಾಡಿದರು.
ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯಿಂದ ರಾಯಚೂರು ಜಿಲ್ಲೆಯಾದ್ಯಂತ ಕಡಿಮೆ ದಾಖಲಾತಿರುವ ಶಾಲೆಗಳಿಗೆ ಭೇಟಿ ನೀಡಿದಾಗ ಶಾಲೆಯ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಬಹುಪಾಲು ಶಾಲೆಗಳಲ್ಲಿ ಅತಿ ಹೆಚ್ಚು ಅಂದರೆ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಇಬ್ಬರು ಶಿಕ್ಷಕರು ಮಾತ್ರ ಇದ್ದಾರೆ. 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ನಡೆದಿಲ್ಲ. ಇದರಿಂದಾಗಿ ಶಾಲೆಗಳಲ್ಲಿ ಪಾಠ ಮಾಡಲು ಶಿಕ್ಷಕರೇ ಇಲ್ಲದಂತಾಗಿದೆ ಎಂದರು.
ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ನಂತರ ಸಹಿ ಸಂಗ್ರಹ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಘಟಕದ ಕಾರ್ಯದರ್ಶಿ ಬಸವರಾಜ, ಕಾರ್ಯಕರ್ತರಾದ ನಿತೀನ್, ತರುಣ, ಸುಮಂತ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.