ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ 2019ರಲ್ಲಿ ನಡೆದಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಲಿಂಗಸೂಗೂರು ತಾಲ್ಲೂಕಿನ ಗೋನವಾಟ್ಲಾ ಗ್ರಾಮದ ನಿವಾಸಿ ಹುಲ್ಲೇಶ (25) ಶಿಕ್ಷೆಗೆ ಗುರಿಯಾದ ಆರೋಪಿ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ಸಿಪಿಐ ಯಶವಂತ್ ಎಚ್.ಬಿಸ್ನಳ್ಳಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯವು ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ ಆರೋಪಿಯ ಮೇಲಿನ ಅಪಾದನೆ ಸಾಬೀತಾಗಿರುವ ಹಿನ್ನೆಲೆಯಲ್ಲಿ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಆರೋಪಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹15,000 ದಂಡ ವಿಧಿಸಲಾಗಿದೆ. ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ₹4,50,000 ಪರಿಹಾರ ನೀಡಬೇಕು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ.ಮಂಜುನಾಥ ವಾದ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.