ಹಟ್ಟಿ ಚಿನ್ನದ ಗಣಿ: ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆಗೆ ಆಗಸ್ಟ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಂಪನಿಯ ಅಧ್ಯಕ್ಷ ಜೆ.ಟಿ. ಪಾಟೀಲ ಹೇಳಿದರು.
ಹಟ್ಟಿ ಚಿನ್ನದ ಗಣಿ ಕಂಪನಿಯ ಸಭಾಂಗಣದಲ್ಲಿ ವಸತಿ ಸಮುಚ್ಚಯ ಶಂಕುಸ್ಥಾಪನೆ ಕಾರ್ಯಕ್ರಮದ ಬಗ್ಗೆ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು ಮತ್ತು ಸಾರ್ವಜನಿಕರಿಗೆ ಆಸನ, ಉಪಾಹಾರ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಆಗಬೇಕು. ಕಾರ್ಯಕ್ರಮಕ್ಕೆ ಅಂದಾಜು 15,000 ಜನರಿಗೆ ತೊಂದರೆಯಾಗದ ರೀತಿಯಲ್ಲಿ ಊಟದ ಸಿದ್ಧತೆ ಮತ್ತು ಕಾರ್ಯಕ್ರಮಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆಯಾಗಬೇಕು. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೇಲುಸ್ತುವಾರಿಯಾಗಬೇಕು ಎಂದರು.
ಮುಖ್ಯಮಂತ್ರಿಗೆ ಅಹವಾಲು ಸಲ್ಲಿಸಲು ಬರುವ ಅರ್ಜಿದಾರರು, ಸಾರ್ವಜನಿಕರು ಮತ್ತು ರೈತ ಕಾರ್ಮಿಕ ಮತ್ತು ಇನ್ನಿತರ ಮುಖಂಡರಿಗೆ ಅನುಕೂಲವಾಗುವಂತೆ ಅರ್ಜಿ ಸಲ್ಲಿಕೆ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಬೇಕು ಎಂದು ತಿಳಿಸಿದರು.
ಶಾಸಕ ಮಾನಪ್ಪ ಡಿ.ವಜ್ಜಲ್ ಮಾತನಾಡಿ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡು ಕೂಡಲೇ ಸಮಿತಿಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಜನರಿಗೆ ಅನುಕೂಲವಾಗುವಂತೆ ಕುಡಿಯುವ ನೀರು ಮತ್ತು ಸರಿಯಾದ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ನಿತೀಶ್ ಕೆ ಮಾತನಾಡಿ, ಮುಖ್ಯಮಂತ್ರಿ ಕಾರ್ಯಕ್ರಮವು ಯಾವುದೇ ರೀತಿಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಡೆಯಲು ಗಣಿ ಕಂಪನಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಇದಕ್ಕೆ ಸಹಾಯ ಬೇಕಿದ್ದರೆ ಸಮಿತಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುವುದು ಎಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಗತ, ಆಸನದಲ್ಲಿ ಶಿಷ್ಟಾಚಾರ ಪಾಲನೆ, ಸನ್ಮಾನ, ಸ್ಮರಣಿಕೆ ವಿತರಣೆ ಸೇರಿದಂತೆ ಇನ್ನಿತರ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಮಾಜಿ ಶಾಸಕ ಡಿ.ಎಸ್.ಹೂಲಗೇರಿ, ಕಂಪನಿಯ ವ್ಯವಸ್ಧಾಪಕ ನಿರ್ದೇಶಕಿ ಆರ್.ಶಿಲ್ಪಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಗಣಿ ಕಂಪನಿ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ, ಯಮನೂರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಧಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.