ADVERTISEMENT

ಸಿಂಧನೂರು | ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಆಗ್ರಹ

ಸಿಪಿಐಎಂಎಲ್ ಲಿಬರೇಶನ್‍ನಿಂದ ಪ್ರತಿಭಟನೆ; ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 8:05 IST
Last Updated 16 ಡಿಸೆಂಬರ್ 2025, 8:05 IST
ಸಿಂಧನೂರಿನ ಸಿಪಿಐಎಂಎಲ್ ಲಿಬರೇಶನ್‍ನಿಂದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಮುಂದೆ ಸೋಮವಾರ ಪ್ರತಿಭಟಿಸಿ ಮುಖ್ಯ ವೈದ್ಯಾಧಿಕಾರಿ ಸುರೇಶಗೌಡ ಅವರ ಮುಖಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಮನವಿ ಪತ್ರ ರವಾನಿಸಲಾಯಿತು
ಸಿಂಧನೂರಿನ ಸಿಪಿಐಎಂಎಲ್ ಲಿಬರೇಶನ್‍ನಿಂದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಮುಂದೆ ಸೋಮವಾರ ಪ್ರತಿಭಟಿಸಿ ಮುಖ್ಯ ವೈದ್ಯಾಧಿಕಾರಿ ಸುರೇಶಗೌಡ ಅವರ ಮುಖಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಮನವಿ ಪತ್ರ ರವಾನಿಸಲಾಯಿತು   

ಸಿಂಧನೂರು: ತಾಲ್ಲೂಕು ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಿ, ಗುಣಮಟ್ಟದ ಚಿಕಿತ್ಸೆ ಸೌಲಭ್ಯ ಒದಗಿಸಬೇಕು. ಕರ್ತವ್ಯದ ಅವಧಿಯಲ್ಲಿ ಖಾಸಗಿ ಕ್ಲಿನಿಕ್ ನಡೆಸುವ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂಎಲ್ ಲಿಬರೇಶನ್‍ನಿಂದ ಸೋಮವಾರ ಪಟ್ಟಣದ ತಾಲ್ಲೂಕು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಲಾಯಿತು.‌ ಬಳಿಕ ಮುಖ್ಯ ವೈದ್ಯಾಧಿಕಾರಿ ಸುರೇಶಗೌಡ ಅವರ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ ಮಾತನಾಡಿ, ‘ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮಂಜೂರಾತಿ ಹುದ್ದೆಗಳನ್ನು ಸಂಪೂರ್ಣ ಭರ್ತಿ ಮಾಡಬೇಕು. ಸಮಯಕ್ಕೆ ಸರಿಯಾಗಿ ವೈದ್ಯರು ಹಾಜರಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಕೊರತೆ ಇರುವ ಎಲ್ಲ ರೀತಿಯ ವೈದ್ಯಕೀಯ ಯಂತ್ರೋಪಕರಣಗಳು, ಸಾಮಗ್ರಿಗಳನ್ನು ಪಟ್ಟಿ ಮಾಡಿ, 1 ತಿಂಗಳೊಳಗೆ ಆಸ್ಪತ್ರೆಯಲ್ಲಿ ವ್ಯವಸ್ಥೆಗೊಳಿಸಬೇಕು. 60 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಂಜೂರಾತಿ ಹುದ್ದೆಗಳನ್ನು ಸಂಪೂರ್ಣ ಭರ್ತಿ ಮಾಡಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಬೇಕು. ಸಮಯ ಪಾಲಿಸದ ವೈದ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಭಗತ್‍ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ, ತಾಲ್ಲೂಕು ಘಟಕದ ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಸದಸ್ಯರಾದ ರಾಘವೇಂದ್ರ ಉಪ್ಪಳ, ಶ್ರೀನಿವಾಸ ಬುಕ್ಕನಟ್ಟಿ, ಮಹಾದೇವ ಅಮರಾಪುರ, ಕಂಠೆಪ್ಪ ರೈತನಗರ ಕ್ಯಾಂಪ್ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.