ADVERTISEMENT

ಪರೀಕ್ಷೆ ನಡೆಸಲು ಮುಂಜಾಗ್ರತೆ: ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 16:00 IST
Last Updated 6 ಜೂನ್ 2020, 16:00 IST
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಿತು
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಿತು   

ರಾಯಚೂರು: ಹೈಕೋರ್ಟ್‌ನ ಮಾರ್ಗದರ್ಶನದಂತೆ ಜೂನ್ 25 ರಿಂದ ಜುಲೈ 4 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ರೀತಿಯ ಸೂಕ್ತ ಮುಂಜಾಗ್ರತೆ ಹಾಗೂ ಭದ್ರತೆಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ದತೆಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೊನಾ ಹಿನ್ನಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಭಿನ್ನ ರೀತಿಯಲ್ಲಿ ನಡೆಸಲಾಗುತ್ತಿದೆ. ರಾಜ್ಯದ 8,48,203 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದು, ಅದಕ್ಕಾಗಿ ರಾಜ್ಯ ಹೈಕೋರ್ಟ್ ನೀಡಿದ ಸವಿಸ್ತಾರ ಎಸ್‌ಒಪಿ ಅನ್ವಯ ಮಕ್ಕಳ ಸುರಕ್ಷತೆ ಹಾಗೂ ಅವರಲ್ಲಿ ಆತ್ಮವಿಶ್ವಾಸ ತುಂಬಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದರು.

ADVERTISEMENT

ಅದೇ ರೀತಿ ಪರೀಕ್ಷಾ ಮೇಲ್ವಿಚಾರಕರು ಕೂಡ ಕಡ್ಡಾಯವಾಗಿ ಹ್ಯಾಂಡ್ ಗ್ಲೌಸ್ ಧರಿಸಲಿದ್ದಾರೆ. ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಉಪಯೋಗಿಸಲು ನಿರ್ದೇಶನ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಹೊರ ಆವರಣದಲ್ಲಿ ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು. ಪೋಷಕರು, ಶಾಲಾ ಆವರಣ ಪ್ರವೇಶಿಸದಂತೆ ಕ್ರಮ ವಹಿಸಬೇಕು. ಪರೀಕ್ಷೆಯ ವೇಳೆ ನಕಲು ಮಾಡುವವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಈ ಪರೀಕ್ಷೆ ಸುಸೂತ್ರವಾಗಿ ನಡೆಸುವ ದಿಸೆಯಲ್ಲಿ ಗೃಹ, ಆರೋಗ್ಯ ಹಾಗೂ ಸಾರಿಗೆ ಇಲಾಖೆಯ ಸಚಿವರೊಂದಿಗೆ ಚರ್ಚಿಸಲಾಗಿದ್ದು, ಅಗತ್ಯ ಭದ್ರತೆ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿದೆ ಎಂದರು.

ಪರೀಕ್ಷೆ ಬರೆಯಲು ಎಷ್ಟು ಮಕ್ಕಳು ಕಾಲ್ನಡಿಗೆಯಲ್ಲಿ ಬರಲಿದ್ದಾರೆ. ಖಾಸಗಿ ವಾಹನಗಳಲ್ಲಿ ಬರುವವರ ಸಂಖ್ಯೆ ಹಾಗೂ ಸರ್ಕಾರ ವತಿಯಿಂದ ಸಾರಿಗೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ಜೂನ್ 10 ರೊಳಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಅಗತ್ಯವಿದಲ್ಲಿ ಖಾಸಗಿ ಶಾಲೆಗಳ ಬಸ್‌ಗಳನ್ನು ಪಡೆಯಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮನೆಯಿಂದಲೆ ನೀರು, ಊಟ, ಉಪಹಾರಗಳನ್ನು ತರಬೇಕು. ಪರೀಕ್ಷಾ ಕೇಂದ್ರಗಳ ಹತ್ತಿರ ಯಾರೂ ಊಟ-ಉಪಹಾರದ ವ್ಯವಸ್ಥೆ ಮಾಡಲು ಅವಕಾಶವಿರುವುದಿಲ್ಲ ಎಂರು ವಿವರಿಸಿದರು.

ಕಂಟೈನ್ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಪ್ರಮುಖವಾಗಿ ಪರೀಕ್ಷಾ ಕೇಂದ್ರಗಳ ಶೌಚಾಲಯ ಸ್ವಚ್ಛವಾಗಿರಬೇಕು. ಕುಡಿಯುವ ನೀರು ಸಮರ್ಪಕವಾಗಿರಬೇಕು ಎಂದರು.

ಜೂನ್ 10 ರಿಂದ 20 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಕೊನೆಯ ಸುತ್ತಿನ ಪುನರ್‌ಮನನ ತರಗತಿಗಳನ್ನು ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಜೂನ್ 20ರ ನಂತರ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.

ಶಿಕ್ಷಣ ಇಲಾಖೆಯಿಂದಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತ್ಯೇಕ ಚಾನಲ್‌ವೊಂದನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಚಂದನ ವಾಹಿನಿಯಲ್ಲಿ ಆನ್‌ಲೈನ್ ಕ್ಲಾಸ್‌ಗಳ ಪ್ರಸಾರದ ಯಶಸ್ಸಿನಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಬೇಕು. ಜಿಲ್ಲೆಯ ಜನಪ್ರತಿನಿಧಿಗಳು ಈ ಪರೀಕ್ಷೆ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯದಲ್ಲಿ ಈ ರೀತಿಯ ಅವಕಾಶ ದೊರೆಯುವುದು ಬಹಳ ದುರ್ಲಬ. ಎದುರಾಗಿರುವ ಈ ಸಮಸ್ಯೆಯನ್ನು ಅವಕಾಶವೆಂದು ಪರಿಗಣಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಅವರು ಸಲಹೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್‌. ಗೋನಾಳ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗುತ್ತದೆ. ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಆರೋಗ್ಯ ಇಲಾಖೆ ವತಿಯಿಂದ 70 ಸಾವಿರ ಮಾಸ್ಕ್‌ಗಳನ್ನು ನೀಡಿದೆ. ಮಕ್ಕಳು ಪರೀಕ್ಷೆ ಕೇಂದ್ರ ಪ್ರವೇಶಿಸುವ ಮುನ್ನ ಥರ್ಮಲ್ ಸ್ಕ್ಯಾನ್ ಮಾಡಿ ಒಳಗಡೆ ಬಿಡಲಾಗುತ್ತದೆ. ಎಲ್ಲ ಕೇಂದ್ರಗಳಿಗೆ ಔಷಧಿ ಸಿಂಪಡಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಿರ್ವಹಿಸಲು ಈಗಾಗಲೇ ಎಲ್ಲ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಅವರು ಮಾತನಾಡಿ, ಪ್ರತಿ ಕೇಂದ್ರಕ್ಕೆ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತದೆ. ಕೇಂದ್ರದ ಸುತ್ತ ಮುತ್ತಲಿನ ಪ್ರದೇಶದಲ್ಲಿ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಲಿದ್ದು, ಎಲ್ಲ ತರಹದ ಜೆರಾಕ್ಸ್ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತದೆ. ನಕಲಿಗೆ ಅವಕಾಶ ಮಾಡಿಕೊಡದಂತೆ ನಿಗಾವಹಿಸಲಾಗುತ್ತದೆ ಎಂದರು.

ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಪರೀಕ್ಷೆ ಬರೆಯಲು ಗ್ರಾಮೀಣ ಪ್ರದೇಶಗಳಿಂದ ಬರುವ ಮಕ್ಕಳಿಗೆ ಸಾರಿಗೆ ಮತ್ತು ಊಟದ ವ್ಯವಸ್ಥೆ ಮಾಡಬೇಕೆಂದು ಸಚಿವರಿಗೆ ಮನವಿ ಮಾಡಿದರು.

ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾತನಾಡಿ, ಕೊಪ್ಪಳ ಜಿಲ್ಲೆಯ 80 ಕೇಂದ್ರಗಳಲ್ಲಿ 27,183 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು, ಶಾಸಕರಾದ ಕೆ.ಶಿವನಗೌಡ ನಾಯಕ, ಡಾ.ಶಿವರಾಜ್ ಪಾಟೀಲ, ವೆಂಕಟರಾವ್ ನಾಡಗೌಡ, ದದ್ದಲ್ ಬಸನಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಕಲಬುರ್ಗಿ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಲಿನ್ ಅತುಲ್, ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ, ಸಹಾಯಕ ಆಯುಕ್ತರಾದ ಸಂತೋಷ ಕಾಮಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.