
ರಾಯಚೂರು: ‘ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪ್ರಾಣಿ ದಯಾ ಸಂಘದ ವತಿಯಿಂದ ಆಯೋಜಿಸಿದ್ದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಬೀದಿ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ರೋಗ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮಗಳನ್ನು ನಡೆಸಬೇಕು. ಸರ್ವೋಚ್ಛ ನ್ಯಾಯಾಲಯವು ನೀಡಿರುವ ಆದೇಶದಲ್ಲಿನ ಅಂಶಗಳನ್ನು ಪಾಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಸರ್ಕಾರಿ ಹಾಗೂ ಖಾಸಗಿ ಶೈಕ್ಷಣಿಕ ಸಂಸ್ಥೆಗಳು, ಜಿಲ್ಲಾ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ವೈದ್ಯಕೀಯ ಕಾಲೇಜುಗಳು ಸೇರಿದಂತೆ ಸಾರ್ವಜನಿಕ ಕ್ರೀಡಾಂಗಣಗಳು ಅಥವಾ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಬಸ್ ಡಿಪೊಗಳು, ರೈಲು ನಿಲ್ದಾಣಗಳು ಇತ್ಯಾದಿ ಸಾರ್ವಜನಿಕ ಪ್ರದೇಶಗಳಲ್ಲಿ ಇರುವ ಬೀದಿ ನಾಯಿಗಳನ್ನು ಸೆರೆಹಿಡಿದು ಅವುಗಳಿಗೆ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಿಸಬೇಕು. ಈ ದಿಸೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಆದಷ್ಟು ಬೇಗ ಕಾರ್ಯಾಚರಣೆ ಶುರುಮಾಡಬೇಕು’ ಎಂದು ನಿರ್ದೇಶನ ನೀಡಿದರು.
‘ರೇಬೀಸ್ ಪೀಡಿತ ನಾಯಿಗಳನ್ನು ಪ್ರತ್ಯೇಕ ಕಟ್ಟಡದಲ್ಲಿ ಇಡಬೇಕು. ಬೀದಿ ನಾಯಿಗಳಿಗೆ ಸಂತಾನ ಶಕ್ತಿ ನಿಯಂತ್ರಣ ಶಸ್ತ್ರಚಿಕಿತ್ಸೆ ಮಾಡಲು ಪ್ರಾಣಿ ಕಲ್ಯಾಣ ಮಂಡಳಿಯಿಂದ ಮಾನ್ಯತೆ ಪಡೆದ ಎನ್.ಜಿ.ಒ. ಗಳಲ್ಲದೇ ಹೆಚ್ಚಿನ ಸಂಸ್ಥೆಗಳಿಂದ ಪ್ರಸ್ತಾವನೆ ಪಡೆದು ನಿಯಮಾನುಸಾರ ಕ್ರಮ ವಹಿಸಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯ ಉಪ ನಿರ್ದೇಶಕ ಪೋಮ್‌ಸಿಂಗ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿ ಚಂದ್ರಶೇಖರ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ತಿಮ್ಮಪ್ಪ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ ಜಿಲ್ಲೆಯ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.