ADVERTISEMENT

‘ಬಾಲ್ಯ ವಿವಾಹಕ್ಕೆ ಸಹಕರಿಸುವವರ ವಿರುದ್ಧ ಕ್ರಮ ಕೈಗೊಳ್ಳಿ’: ರಾಹುಲ್ ಪಾಂಡ್ವೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 13:13 IST
Last Updated 3 ಜೂನ್ 2025, 13:13 IST
ರಾಯಚೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಸಭೆ ನಡೆಸಿದರು
ರಾಯಚೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಸಭೆ ನಡೆಸಿದರು   

ರಾಯಚೂರು: ‘ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಬೇಕು. ಬಾಲ್ಯ ವಿವಾಹಕ್ಕೆ ಸಹಕಾರ ನೀಡುವ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಲ್ಲಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ ಸೋಮವಾರ ಭೇಟಿ ನೀಡಿ ಸಿಡಿಪಿಒಗಳು, ಮಹಿಳಾ ಕಲ್ಯಾಣ ಅಧಿಕಾರಿ ಹಾಗೂ ಮಕ್ಕಳ ರಕ್ಷಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

‘ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲು ಇಲಾಖೆ ಅಧಿಕಾರಿಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

‘ಹದಿಹರೆಯದವರ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ಪೂರೈಕೆ ಮಾಡಬೇಕು. ಗ್ರಾಮಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ನಿವೇಶನ ಒದಗಿಸಲು ಆಯಾ ಗ್ರಾಮ ಪಂಚಾಯಿತಿಗಳು ಕ್ರಮ ವಹಿಸಬೇಕು’ ಎಂದು ಸೂಚನೆ ನೀಡಿದರು.

‘ಅಂಗನವಾಡಿ ಕೇಂದ್ರಗಳಿಗೆ ಆವರಣ ಗೋಡೆ ನಿರ್ಮಾಣ ಮಾಡಬೇಕಿದೆ. ಇದಕ್ಕೆ ಮಂಜೂರಾತಿ ಕೊಡಬೇಕು’ ಎಂದು ಇಲಾಖೆ ಅಧಿಕಾರಿಗಳು ಸಿಇಒಗೆ ಮನವಿ ಮಾಡಿದರು.

ತೀವ್ರ ಹಾಗೂ ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೈಕೆ ಹಾಗೂ ಅಪೌಷ್ಟಿಕತೆ ನಿವಾರಣಾ ಕ್ರಮಗಳ ಬಗ್ಗೆ ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.

‘ಪಾಲಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಬೇಕು ಹಾಗೂ ನ್ಯೂಟ್ರಿಷನ್ ಪುನರ್ವಸತಿ ಕೇಂದ್ರ (ಎನ್ಆರ್‌ಸಿ)ಗಳನ್ನು ಬಲಪಡಿಸಬೇಕು’ ಎಂದು ತಿಳಿಸಿದರು.

‘ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ಹೆಚ್ಚು ಇದೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ ಆತ್ಮಸಾಕ್ಷಿಯಾಗಿ ಕರ್ತವ್ಯಗಳನ್ನು ನಿರ್ವಹಿಸಬೇಕು’ ಎಂದು ಸೂಚಿಸಿದರು.

‘ಅಂಗನವಾಡಿ ಕೇಂದ್ರಗಳನ್ನು ಶುಚಿಯಾಗಿಡಲು ಹಾಗೂ ಕೇಂದ್ರಗಳನ್ನು ಆಕರ್ಷಕವಾಗಿ ನಿರ್ವಹಿಸುವ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ನೀಡುವ ಚಿಂತನೆ ನಡೆದಿದೆ. ಅದಕ್ಕೆ ರೂಪರೇಷೆಗಳನ್ನು ಸಿದ್ಧಪಡಿಸಿ ಸಿಡಿಪಿಒಗಳಿಗೆ ತಿಳಿಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.