ADVERTISEMENT

ರಾಯಚೂರು: ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಶಾಸಕ ರಾಜಾ ವೆಂಕಟಪ್ಪ ನಾಯಕ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 10:10 IST
Last Updated 18 ಜನವರಿ 2020, 10:10 IST
ಮಾನ್ವಿಯಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿದರು
ಮಾನ್ವಿಯಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿದರು   

ಮಾನ್ವಿ: ‘ಮುಂಬರುವ ಬೇಸಿಗೆಯಲ್ಲಿ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶುಕ್ರವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಯೋಜನೆ (ಕೆಡಿಪಿ) ಸಭೆಯಲ್ಲಿ ಅವರು ಮಾತನಾಡಿದರು.

‘ಅಗತ್ಯ ಇರುವ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಬೇಕು. ಸ್ಥಗಿತಗೊಂಡಿರುವ ಘಟಕಗಳ ದುರಸ್ತಿಗೊಳಿಸಬೇಕು. ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ತುರ್ತಾಗಿ ಆರಂಭಿಸಿ ಪೂರ್ಣಗೊಳಿಸಬೇಕು’ ಎಂದರು.

ADVERTISEMENT

‘ಹೀರಾ, ಬೆಳವಾಟ ಹಾಗೂ ಚಿಕ್ಕಕೊಟ್ನೇಕಲ್‌ ಗ್ರಾಮಗಳು ನವಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು ₹1.30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಎಇಇ ಶಿವಪ್ಪ ಮಾತನಾಡಿ,‘ ತಾಲ್ಲೂಕಿನ ವಿವಿಧೆಡೆ ಒಟ್ಟು 32 ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಈ ಘಟಕಗಳ ದುರಸ್ತಿ ಕಾರ್ಯ ಕೈಗೊಳ್ಳುವ ಕುರಿತು ವರದಿ ನೀಡಲು ತಾಂತ್ರಿಕ ತಜ್ಞರ ಸಮಿತಿ ರಚಿಸುವಂತೆ ಮೇಲಧಿಕಾರಿಗಳನ್ನು ಕೋರಲಾಗಿದೆ. ಈ ಸಮಿತಿ ನೀಡುವ ವರದಿ ಅನ್ವಯ ಅನುದಾನ ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ’ ಎಂದರು.

ಪ್ರಾದೇಶಿಕ ಅರಣ್ಯ ವಲಯದ ಅಧಿಕಾರಿ ರಾಜೇಶ್‌ ಮಾತನಾಡಿ, 'ತಾಲ್ಲೂಕಿನ ಕವಿತಾಳ ಭಾಗದಲ್ಲಿ 50 ಹೆಕ್ಟೇರ್‌ ಪ್ರದೇಶದಲ್ಲಿ ನೆಡುತೋಪುಗಳನ್ನು ಬೆಳೆಸಿ ಅರಣ್ಯ ಪ್ರದೇಶ ವಿಸ್ತರಣೆಯ ಗುರಿ ಹೊಂದಲಾಗಿದೆ. ಪೋತ್ನಾಳ ಹಾಗೂ ಮಾನ್ವಿ ಪಟ್ಟಣದ ವಿವಿಧೆಡೆ ಸಸಿಗಳನ್ನು ನೆಡಲಾಗಿದೆ’ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ ಮಾತನಾಡಿ,‘ ಮಾನ್ವಿ, ಕವಿತಾಳ ಹಾಗೂ ಸಿರವಾರ ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್‌ಗಳ ಅಗತ್ಯವಿದೆ’ ಎಂದರು.

ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ,‘ ಮಾನ್ವಿ ಪಟ್ಟಣದಲ್ಲಿ ನಿರ್ಮಿಸಲಾಗಿರುವ ತಾಯಿ ಮಗು ಆಸ್ಪತ್ರೆ, ಕಲ್ಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿರವಾರದ 30 ಹಾಸಿಗೆಗಳಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ಶೀಘ್ರ ಉದ್ಘಾಟಿಸಲಾಗುವುದು. ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಇತರ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಬಿಸಿಎಂ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಪೂರೈಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶುಪಾಲನಾ ಹಾಗೂ ವೈದ್ಯಕೀಯ ಇಲಾಖೆ, ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಗತಿ ವರದಿ ಮಂಡಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ.ಗಂಗಣ್ಣ ಸಾಹುಕಾರ ಹಾಗೂ ಕಿರಿಲಿಂಗಪ್ಪ ಕವಿತಾಳ, ತಾಲ್ಲೂಕು ಪಂಚಾಯಿತಿ ಪ್ರಭಾರಿ ಅಧ್ಯಕ್ಷ ಚೆನ್ನಬಸವ ಬೆಟ್ಟದೂರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.