ADVERTISEMENT

‘ಸಮಾಜದಲ್ಲಿ ಶಿಕ್ಷಕರ ಸ್ಥಾನ ಮಹತ್ವದ್ದು’

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 14:42 IST
Last Updated 13 ಡಿಸೆಂಬರ್ 2019, 14:42 IST
ರಾಯಚೂರಿನ ರಂಗಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗುರುಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಉದ್ಘಾಟಿಸಿದರು
ರಾಯಚೂರಿನ ರಂಗಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗುರುಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಉದ್ಘಾಟಿಸಿದರು   

ರಾಯಚೂರು: ಸಮಾಜದಲ್ಲಿ ಶಿಕ್ಷಕರು ಮಹತ್ವದ ಸ್ಥಾನ ಹೊಂದಿದ್ದಾರೆ. ಪ್ರತಿ ಶಿಕ್ಷಕರಿಗೆ ಭದ್ರತೆ ಕಲ್ಪಿಸುವ ಕಾರ್ಯ ನಡೆಯಬೇಕು ಎಂದು ಶಾಸಕ ಬಸನಗೌಡ ದದ್ದಲ್ ಅಭಿಪ್ರಾಯ ಪಟ್ಟರು.

ನಗರದ ರಂಗಮಂದಿರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಗುರುಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಕರಿಗೆ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಹಿಂದೆ ಸರ್ಕಾರದ ಗಮನಕ್ಕೆ ತಂದು 19 ಭವನಗಳನ್ನು ಮಂಜೂರು ಮಾಡಲಾಗಿದೆ. ಕಟ್ಟಡ ಕಾಮಗಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ಬಿಜೆಪಿ ಸರ್ಕಾರ ಅಧಿಕಾರ ಇರುವುದರಿಂದ ನಗರದ ಶಾಸಕರೊಂದಿಗೆ ಸೇರಿಕೊಂಡು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ನಗರದ ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ‘ನನ್ನ ಏಳಿಗಿಗೆ ಕಾರಣ ಶಿಕ್ಷಕರೇ, ಈ ಹಿಂದೆ ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳಿಗೆ ಅಪಾರ ಗೌರವದಿಂದ ಕಾಣುತ್ತಿದ್ದೇವು. ಈಗಿನ ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವದಿಂದ ಕಾಣುವುದು ವಿರಳ. ಸಮಾಜದಲ್ಲಿ ಗುರುತಿಸಿಕೊಂಡಿರುವುದಕ್ಕೆ ಶಿಕ್ಷಕರ ಮಾರ್ಗದರ್ಶನ ಹಾಗೂ ಅವರು ಕಲಿಸಿದ ವಿದ್ಯೆ ಕಾರಣ’ ಎಂದು ಹೇಳಿದರು.

ಶಿಕ್ಷಣ ವ್ಯವಸ್ಥೆಯೂ ಕುಸಿತಗೊಂಡಿದೆ. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಲು ಯಾವುದೇ ಶಿಕ್ಷೆ ನೀಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳಿಗೆ ಉತ್ತಮ ಬೋಧನೆಯ ಮೂಲಕ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

ಭವನದ ನಿರ್ಮಾಣಕ್ಕೆ ತಮ್ಮ ಅನುದಾನದಿಂದ ₹10 ಲಕ್ಷ ನೀಡಲಾಗುವುದು. ಹಳೆಯದಾಗಿರುವ ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಟ್ಟಡಗಳನ್ನು ನೂತನ ಕಚೇರಿ ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಪ್ಪ ಮಾತನಾಡಿದರು.

ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಖಾಸಿಂ ನಾಯಕ, ತಾಪಂ ಅಧ್ಯಕ್ಷ ಜಯಮ್ಮ ನಸರಣ್ಣಾಚಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮೊಹಿನುಲ್ಲಾ ಹಕ್, ಮಹೇಬೂಬ್, ಸಂಘದ ಜಿಲ್ಲಾ ಉಪಾಧ್ಯಕ್ಷ ವಿನೋದಕುಮಾರ, ಸದಸ್ಯರಾದ ಬಂದೇನವಾಜ್ ಇದ್ದರು. ಕೆ.ಗಿರಿಜಾ ರಾಜಶೇಖರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.