ರಾಯಚೂರು: ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಬುಧವಾರ ನಗರದ ಯುಜಿ-ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಬಯೊಮೆಟ್ರಿಕ್ ಕಾರ್ಯನಿರ್ವಹಿಸದ ಕಾರಣ ಕೆಲ ಕ್ಷಣ ಆತಂಕ ಎದುರಿಸಬೇಕಾಯಿತು.
ನಗರದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆ, ಹಮದರ್ದ್ ಪ್ರೌಢ ಶಾಲೆ ಹಾಗೂ ಎಸ್‌ಆರ್‌ಪಿಎಸ್ ಪಿಯು ಕಾಲೇಜುಗಳಲ್ಲಿ ಪರೀಕ್ಷಾರ್ಥಿಗಳ ಗುರುತು ಖಾತರಿಗೆ ನಡೆಸಲಾದ ಬಯೊಮೆಟ್ರಿಕ್ ಕಾರ್ಯನಿರ್ವಹಿಸಲಿಲ್ಲ. ಹೀಗಾಗಿ 15 ನಿಮಿಷಗಳವರೆಗೆ ವಿದ್ಯಾರ್ಥಿಗಳನ್ನು ಪ್ರವೇಶ ದ್ವಾರದಲ್ಲೇ ನಿಲ್ಲಿಸಲಾಗಿತ್ತು.
ವಿದ್ಯಾರ್ಥಿಗಳ ಪಾಲಕರು ಹಾಗೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿ ತಾಂತ್ರಿಕ ಸಮಸ್ಯೆಯ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ನಿತೀಶ್ ಅವರು ತಕ್ಷಣ ಆಧಾರ್ ಕಾರ್ಡ್ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು. ನಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಗಳಿಗೆ ಕಳಿಸಿಕೊಡಲಾಯಿತು.
ಯುಜಿ-ಸಿಇಟಿ ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಎರಡು ದಿನ ಮೊದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ, ಬಯೊಮೆಟ್ರಿಕ್ ಮೂಲಕ ತಪಾಸಣೆ ನಡೆಸುವ ಏಜೆನ್ಸಿಗಳು ಸರಿಯಾಗಿ ತಯಾರಿ ಮಾಡಿಕೊಂಡಿರಲಿಲ್ಲ. ಅನುಭವ ಇಲ್ಲದ ಕೆಲ ಯುವಕರನ್ನು ನಿಯೋಜಿಸಲಾಗಿತ್ತು. ಹೀಗಾಗಿ ಸಮಸ್ಯೆ ಉಲ್ಣಣಗೊಂಡಿತು ಎಂದು ಪರೀಕ್ಷಾ ಕೇಂದ್ರದ ಸಿಬ್ಬಂದಿ ತಿಳಿಸಿದರು.
ಜಿಲ್ಲೆಯಲ್ಲಿ 21 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗದಿದೆ. 6,532 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬಯೊಮೆಟ್ರಿಕ್ ತಪಾಸಣೆ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಆದರೆ, ಆಧಾರ್ ಕಾರ್ಡ್ ಪರಿಶೀಲಿಸಿ ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.