ADVERTISEMENT

ಮಕ್ಕಳ ಗ್ರಾಮಸಭೆ ಆಯೋಜಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2018, 13:29 IST
Last Updated 2 ನವೆಂಬರ್ 2018, 13:29 IST

ರಾಯಚೂರು: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ನಿಯಮಾನುಸಾರ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ವಿಶೇಷ ಗ್ರಾಮಸಭೆಯನ್ನು ಕಡ್ಡಾಯವಾಗಿ ಆಯೋಜನೆ ಮಾಡಬೇಕು ಎಂದು ಮಕ್ಕಳ ಹಕ್ಕುಗಳ ಕ್ಲಬ್‌ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷೆ ವಿದ್ಯಾರ್ಥಿನಿ ಅಕ್ಷತಾ ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಲೆಗೆ ಹೋಗಬೇಕಿರುವ ಬಹಳಷ್ಟು ಮಕ್ಕಳು ಕೃಷಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ. ದೇವದುರ್ಗ ತಾಲ್ಲೂಕಿನಲ್ಲಿ ಅತಿಹೆಚ್ಚು ಮಕ್ಕಳನ್ನು ಸಾಗಾಣಿಕೆ ಮಾಡಲಾಗುತ್ತಿದೆ. ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕಿರುವ ಅವಧಿಯಲ್ಲಿ ಗ್ಯಾರೇಜ್‌, ಹೊಟೇಲ್‌, ಡಾಬಾ ಹಾಗೂ ಗದ್ದೆಗಳಲ್ಲಿ ಮಕ್ಕಳು ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಮಕ್ಕಳಲ್ಲಿ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ ಡಾನ್‌ ಬೊಸ್ಕೊ ಸಮಾಜ ಸಂಸ್ಥೆಯು ಮಕ್ಕಳ ಹಕ್ಕುಗಳ ಶಿಕ್ಷಣ ಮತ್ತು ಜಾಗೃತಿ ಆಂದೋಲನ (ಕ್ರೀಡ್‌–2) ಆರಂಭಿಸಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಬೇಕು ಎಂದು ಹೇಳಿದರು.

ADVERTISEMENT

ಒಕ್ಕೂಟದ ಉಪಾಧ್ಯಕ್ಷ ವಿಶ್ವರಾಧ್ಯ ಮಾತನಾಡಿ, ಸರ್ಕಾರಿ ಶಾಲೆಗಳಲಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು. ಜಾಲಹಳ್ಳಿಯ ಮೊರಾರ್ಜಿ ಶಾಲೆಯ ಬಳಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾದ ಬಸವರಾಜ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದರು.

ರಾಯಚೂರಿನ ಎಲ್ಲ ಮೊರಾರ್ಜಿ ವಸತಿ ಶಾಲೆಗಳು ಮತ್ತು ಸರ್ಕಾರಿ ವಸತಿ ನಿಲಯಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡಬೇಕು. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮತ್ತು ಮಕ್ಕಳ ಸಾಗಾಣಿಕೆ ತಡೆದು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮವನ್ನು ಜರುಗಿಸಬೇಕು. ಮಕ್ಕಳ ರಕ್ಷಣೆ ಮಾಡಬೇಕು ಎಂದು ಹೇಳಿದರು.

ಒಕ್ಕೂಟದ ಕಾರ್ಯದರ್ಶಿ ರಾಮಣ್ಣ, ಜಿಲ್ಲಾ ಸಂಯೋಜಕ ಸಿದ್ದಲಿಂಗಪ್ಪ ಕಾಕರಗಲ್‌ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.