ADVERTISEMENT

ಕಾರ್ಮಿಕ ವಿರೋಧಿ ನೀತಿ ಹಿಮ್ಮೆಟ್ಟಿಸಲು ಮುಂದಾಗಿ

ವಿಭಾಗ ಮಟ್ಟದ ಕಾರ್ಯಾಗಾರದಲ್ಲಿ ಸಿಐಟಿಯು ಉಪಾಧ್ಯಕ್ಷ ಆರ್.ಎಸ್.ಬಸವರಾಜ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 15:32 IST
Last Updated 21 ಆಗಸ್ಟ್ 2019, 15:32 IST
ರಾಯಚೂರಿನ ಅಯ್ಯಪ್ಪಸ್ವಾಮಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಅಂಗನವಾಡಿ ನೌಕರರ ವಿಭಾಗಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪ್ರತಿನಿಧಿಗಳು
ರಾಯಚೂರಿನ ಅಯ್ಯಪ್ಪಸ್ವಾಮಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಅಂಗನವಾಡಿ ನೌಕರರ ವಿಭಾಗಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪ್ರತಿನಿಧಿಗಳು   

ರಾಯಚೂರು: ಬಂಡವಾಳ ಶಾಹಿಗಳ ಪರವಾಗಿ ಕೇಂದ್ರ ಸರ್ಕಾರ ವೇಗವಾಗಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತಂದು ಕಾರ್ಮಿಕರ ಹಕ್ಕುಗಳಿಗೆ ಧಕ್ಕೆ ಮಾಡಲಾಗುತ್ತಿದೆ. ಇಂತಹ ನೀತಿಗಳನ್ನು ಹಿಮ್ಮೆಟ್ಟಿಸಲು ಕಾರ್ಮಿಕರು ಮುಂದಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಆರ್.ಎಸ್.ಬಸವರಾಜ ಆರೋಪಿಸಿದರು.

ನಗರದ ಅಯ್ಯಪ್ಪಸ್ವಾಮಿ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಅಂಗನವಾಡಿ ನೌಕರರ ವಿಭಾಗಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಜುಲೈನಲ್ಲಿ ಮಂಡಿಸಿರುವ ಬಜೆಟ್‌ನಲ್ಲಿ ಹೊಸ ವೇತನ ಮಸೂದೆ 2019ನ್ನು ಜಾರಿಮಾಡುವ ಮೂಲಕ ಕಾರ್ಮಿಕರಿಗೆ ಕನಿಷ್ಠ ವೇತನ ನಿರಾಕರಿಸಿದೆ. 44 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕರ ಹಕ್ಕು ಕಸಿಯಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ಖಾಸಗಿ ಬಂಡವಾಳಕ್ಕೆ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ. ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ನಿಟ್ಟಿನಲ್ಲಿ ಕಾನೂನಿನಲ್ಲಿ ಅವಕಾಶ ನೀಡದೇ ಶೋಷಣೆಗೆ ಗುರಿಯಾಗಿಸಲಾಗುತ್ತಿದೆ ಎಂದು ದೂರಿದರು.

ADVERTISEMENT

ಸ್ಕೀಮ್ ಅಡಿಯಲ್ಲಿ ಕೆಲಸ ಮಾಡುವ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಮಿಕರಿಗೆ ಉದ್ಯೋಗದ ಭದ್ರತೆ ಇಲ್ಲದಂತಾಗಿದೆ. ಈ ಯೋಜನೆಗಳನ್ನು ಖಾಸಗೀಕರಿಸುವ ಮೂಲಕ ನೌಕರರನ್ನು ಬೀದಿಗೆ ತಳ್ಳಲಾಗುತ್ತಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದ್ದು, ಅಪೌಷ್ಟಿಕತೆ ನಿವಾರಿಸಲು ಆರಂಭಿಸಿದ ಈ ಯೋಜನೆಯ ಜವಾಬ್ದಾರಿಯಿಂದ ಸರ್ಕಾರ ತಪ್ಪಿಸಿಕೊಳ್ಳುತ್ತಿದೆ ಎಂದರು.

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬದಲು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡಲು ಹೊರಟಿರುವ ಸರ್ಕಾರದ ಕ್ರಮ ಸರಿಯಲ್ಲ. ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವಪ್ರಾಥಮಿಕ ಶಾಲೆ ಆರಂಭಿಸಿ ನೌಕರರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ತಿಳಿಸಿದರು.

ಅಂಗನವಾಡಿ ನೌಕರರ ಸಂಘದ ರಾಜ್ಯ ಅಧ್ಯಕ್ಷೆ ಎಸ್.ವರಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಎಸ್.ಎಚ್.ಸುನಂದ, ಗೌರವಾಧ್ಯಕ್ಷೆ ಶಾಂತಾ ಗಂಟೆ, ಮುಖಂಡರಾದ ಲಕ್ಷ್ಮೀದೇವಮ್ಮ, ಕಲಾವತಿ, ಶ್ರೀದೇವಿ ಚುಡೆ, ಬಿಸಿಯೂಟ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಮಾಲಿನಿ ಮೇಸ್ತಾ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ, ಸಹ ಕಾರ್ಯದರ್ಶಿ ಡಿ.ಎಸ್.ಶರಣಬಸವ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಎಚ್.ಪದ್ಮಾ, ಕಾರ್ಯದರ್ಶಿ ರಂಗಮ್ಮ ಅನ್ವರ, ವರಲಕ್ಷ್ಮೀ, ಕೆಪಿಆರ್‌ಎಸ್ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.