ADVERTISEMENT

ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2019, 14:30 IST
Last Updated 14 ಆಗಸ್ಟ್ 2019, 14:30 IST
ರಾಯಚೂರಿನಲ್ಲಿ ಬುಧವಾರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಬುಧವಾರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು   

ರಾಯಚೂರು: ನೆರೆ ಹಾಗೂ ಬರಗಾಲ ಪರಿಹಾರ ನೀಡಬೇಕು. ಬರ ಕಾಮಗಾರಿ ಆರಂಭಿಸಿ ವಲಸೆ ತಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನೆರೆಯಿಂದ ಮುಳಗಡೆಯಾದ ಗ್ರಾಮಗಳ ಜನರಿಗೆ ರಕ್ಷಣೆ ಹಾಗೂ ಮೂಲ ಸೌಕರ್ಯ ಒದಗಿಸಿ ಪುನರ್ವಸತಿ ಕಲ್ಪಿಸಬೇಕು. ನರೇಗಾ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಿ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಿ, ಕೂಲಿ ₹600 ನಿದಗಿ ಮಾಡಬೇಕು. ಹೋಬಳಿಗಳಲ್ಲಿ ಮೇವಿನ ಕೇಂದ್ರಗಳನ್ನು ಪುನಃ ಪ್ರಾರಂಭಿಸಿ ಮೇವು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು, ಸಮಯಕ್ಕೆ ಸರಿಯಾಗಿ ಮಳೆ ಬರದ ಕಾರಣ ಬೆಳೆಗಳು ನಾಶವಾಗಿವೆ. ಎಲ್ಲ ರೈತರಿಗೆ ಬೆಳೆ ಪರಿಹಾರ ಮಂಜೂರು ಮಾಡಬೇಕು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ನೋಂದಣಿ ಅವಧಿ ಅಕ್ಟೋಬರ್‌ವರೆಗೆ ವಿಸ್ತರಿಸಬೇಕು. ಕೃಷ್ಣಾ ಮತ್ತು ತುಂಗಭದ್ರಾ ನದಿ ಪ್ರವಾಹದಿಂದ ಹಾನಿಗೊಳಗಾದ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಮೂರು ವರ್ಷಗಳಿಂದ ಬರಗಾಲ ಇರುವುದರಿಂದ ಎಲ್ಲ ರೀತಿಯ ಸಾಲ ಮನ್ನಾ ಮಾಡಬೇಕು. ಸರ್ಕಾರಿ ಭೂಮಿ ಸಾಗುವಳಿದಾರರಿಗೆ ಅಕ್ರಮ ಸಕ್ರಮ ಯೋಜನೆಯಡಿ ಮತ್ತೊಮ್ಮೆ ಅರ್ಜಿ ಹಾಕಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ರಂಗಪ್ಪ ಯಾಪಲದಿನ್ನಿ, ರಂಗನಗೌಡ ಕೊತ್ತದೊಡ್ಡಿ, ಹಂಪಯ್ಯ, ಹನುಮಂತು, ನರಸಿಂಹಲು, ಹುಸೇನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.