ADVERTISEMENT

ರಾಯಚೂರು | ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 16 ಮೇ 2020, 14:00 IST
Last Updated 16 ಮೇ 2020, 14:00 IST
ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಬಾರದು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಮುಖಂಡರು ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಬಾರದು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಮುಖಂಡರು ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.   

ರಾಯಚೂರು: ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಅಥವಾ ರದ್ದುಗೊಳಿಸುವ ತೀರ್ಮಾನ ಕೈಬಿಡಬೇಕು. ಎಪಿಎಂಸಿ, ಭೂ ಗುತ್ತಿಗೆ ಹಾಗೂ ಖರೀದಿ ಕಾಯ್ದೆಗಳನ್ನು ದುರ್ಬಲಗೊಳಿಸಬಾರದು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ (ಗ್ರಾಕೂಸ್)ಮುಖಂಡರು ಶನಿವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ನೆರವಿಗೆ ಬರುವ ಬದಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ದುಡಿಯುವ ಜನರ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳ ಹೋರಾಟದ ಫಲವಾಗಿ ಒದಗಿಸಿರುವ ಕಾರ್ಮಿಕ ಕಾನೂನುಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸಲು ಮುಂದಾಗಿದೆ ಎಂದು ದೂರಿದರು.

ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಈಗಾಗಲೇ ಸುಗ್ರೀವಾಜ್ಞೆ ಮೂಲಕ ಕಾನೂನುಗಳನ್ನು ನಿಷ್ಕ್ರಿಯಗೊಳಿಸಿವೆ. ಕಾಯ್ದೆ ಬದಲಾವಣೆಗಳ ಉದ್ದೇಶ ಸಾಂಕ್ರಾಮಿಕ ರೋಗದ ಇಡೀ ವೆಚ್ಚ ಮತ್ತು ಬಿಕ್ಕಟ್ಟುಗಳನ್ನು ಕಾರ್ಮಿಕ ವರ್ಗಕ್ಕೆ ವರ್ಗಾಯಿಸುವುದಾಗಿದೆ. ಅತ್ತ ಬಂಡವಾಳಶಾಹಿಗಳ ಹಿತಾಸಕ್ತಿ ಮತ್ತು ಲಾಭ ಮಾಡಿಕೊಡುತ್ತಿದೆ. ಇದರಿಂದ ರೈತರು ಮತ್ತು ಕಾರ್ಮಿಕರಿಗೆ ಸಾಕಷ್ಟು ಅನ್ಯಾಯವಾಗಲಿದೆ ಎಂದರು.

ADVERTISEMENT

ಕಾಯ್ದೆ ಬದಲಾಯಿಸುವ ಪ್ರಕ್ರಿಯೆ ಆರಂಭವಾಗಲಿದ್ದು ಕೂಡಲೇ ಈ ನಿರ್ದಾರ ಹಿಂಪಡೆಯಬೇಕು. ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವಾಗುವುವ ನಿಟ್ಟಿನಲ್ಲಿ ಕೊರೋನಾ ಬಿಕ್ಕಟ್ಟು ಮುಗಿಯುವವರೆಗೆ ಎಲ್ಲಾ ಬಡ ಕುಟುಂಬಗಳಿಗೆ ಸಮಗ್ರ ರೇಷನ್ ಕಿಟ್ ನೀಡಬೇಕು ಎಂದು ಆಗ್ರಹಿಸಿದರು.

ಗುರುರಾಜ್, ಬಸವರಾಜ್, ಮಾರಪ್ಪ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.