ADVERTISEMENT

ಪುನರ್ವಸತಿ ‌ಕಲ್ಪಿಸುವಂತೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2020, 19:35 IST
Last Updated 11 ಮಾರ್ಚ್ 2020, 19:35 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಶಕ್ತಿನಗರ, ದೇವಸುಗೂರು ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಶಕ್ತಿನಗರ, ದೇವಸುಗೂರು ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು   

ರಾಯಚೂರು: ತಾಲ್ಲೂಕಿನ ಶಕ್ತಿನಗರ ಗ್ರಾಮದ 1 ಮತ್ತು 2ನೇ ಕ್ರಾಸ್‌ ಎಸ್‌ಬಿಟಿ ಕಾಲೋನಿ ಹಾಗೂ ದೇವಸೂಗೂರಿನ ಬಸವನಗುಡಿ ಗ್ರಾಮ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಶಕ್ತಿನಗರದ 1 ಮತ್ತು 2ನೆ ಕ್ರಾಸ್ ಹಾಗೂ ಬಸವನಗುಡಿ ಹತ್ತಿರ 3,500 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಆರ್‌ಟಿಪಿಎಸ್‌ ಹಾರುಬೂದಿಯಿಂದ ಹಲವರು ಕ್ಯಾನ್ಸರ್, ಟಿಬಿ, ಅಸ್ತಮಾ ಮತ್ತಿತರೆ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈ ಗ್ರಾಮಗಳನ್ನು ಸ್ಥಳಾಂತರ ಮಾಡುವಂತೆ ಅನೇಕ ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿದ್ದರಿಂದ ರಸ್ತೆ ಪಕ್ಕದಲ್ಲಿ ವಾಸಿಸುವ ನೂರಾರು ಕುಟುಂಬಗಳು ಬೀದಿ ಪಾಲಾಗುತ್ತವೆ. ಇದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಥಳಕ್ಕೆ ನೀಡಿ ಪರಿಶೀಲಿಸಿ ಸ್ಥಳಾಂತರ ಮಾಡುವ ಭರವಸೆ ನೀಡಿದ್ದರೂ ಈವರೆಗೆ ಈಡೇರಿಲ್ಲ ಎಂದು ದೂರಿದರು.

ADVERTISEMENT

ಈಗಲಾದರೂ ಎಚ್ಚೆತ್ತುಕೊಂಡು ಸ್ಥಳಾಂತರ ಮಾಡಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ವಾಸುದೇವ ಮೇಟಿ, ತಾಲ್ಲೂಕು ಅಧ್ಯಕ್ಷ ಶಿವಪ್ಪ ಅಲ್ಕೂರ್, ಮೈಲಾರ್, ಬಾನು ಬಿ ಹಾಗೂ ಕಾಲೋನಿ ನಿವಾಸಿಗಳು ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.