ADVERTISEMENT

ನರೇಗಾ ಅನುಷ್ಠಾನದಲ್ಲಿ ರಾಯಚೂರು ಪ್ರಥಮ: ವಿ.ಸೋಮಣ್ಣ

ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಂದ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 12:49 IST
Last Updated 15 ಆಗಸ್ಟ್ 2021, 12:49 IST
ರಾಯಚೂರು ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಬಲೂನ್‌ ಹಾರಿಬಿಟ್ಟರು
ರಾಯಚೂರು ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಬಲೂನ್‌ ಹಾರಿಬಿಟ್ಟರು   

ರಾಯಚೂರು: ನರೇಗಾ ಯೋಜನೆ ಅನುಷ್ಠಾನದಲ್ಲಿ ಕಳೆದ ಸಾಲಿನಲ್ಲಿ ರಾಜ್ಯದಲ್ಲಿಯೆ ಜಿಲ್ಲೆಯು ಪ್ರಥಮ ಸ್ಥಾನದಲ್ಲಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

2020-21ನೇ ಸಾಲಿನಲ್ಲಿ ಗುರಿಮೀರಿ ಮಾನವ ದಿನಗಳನ್ನು ಸೃಷ್ಟಿಸಿ ₹296 ಕೋಟಿ ವೆಚ್ಚ ಮಾಡಲಾಗಿದೆ. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ರೈತರ ಜಮೀನುಗಳಲ್ಲಿ ಅಂತರ್ಜಲ ವೃದ್ಧಿಗೆ ಅನುವಾಗುವಂತೆ 3,745 ಕೃಷಿಹೊಂಡ, 14,454 ಬದು ನಿರ್ಮಾಣ, 431 ತೆರೆದ ಬಾವಿ, 20,184 ಇಂಗು ಗುAಡಿ, 168 ಬೋರ್‌ವೆಲ್ ರಿಚಾರ್ಜ್ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ADVERTISEMENT

ಬಿ.ಆರ್ ಗಣೇಕಲ್ ಏತ ನೀರಾವರಿಗೆ ₹200 ಕೋಟಿ ಮತ್ತು ರಾಯಚೂರು ತಾಲ್ಲೂಕಿನ ಲಿಂಕ್ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ₹212 ಕೋಟಿ ಮೊತ್ತದ ಕಾಮಗಾರಿಗೆ ಮುಖ್ಯ ಮಂತ್ರಿಗಳು ಶೀಘ್ರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ಘೋಷಣೆ ಮಾಡಿ ರಾಜ್ಯದ ಸುಮಾರು 17 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ₹1000 ಕೋಟಿ ಈ ಯೋಜನೆ ಜಾರಿಗೊಳಿಸಿದ್ದಾರೆ. ಮಾಸಾಶನಗಳನ್ನು ಮಾಸಿಕ ₹200 ಹೆಚ್ಚಿಸಿರುವುದು ಫಲಾನುಭವಿಗಳಿಗೆ ವರದಾನವಾಗಿದೆ. ಪರಿಶಿಷ್ಠ ಪಂಗಡದ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಭಾರತದ ಆಶಯದಂತೆ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಈ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹಲವಾರು ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ಫಲವಾಗಿ ರಾಯಚೂರು ಜಿಲ್ಲೆ ಸರ್ವತೋಮುಖ ಅಭಿವೃದ್ಧಿಯೆಡೆಗೆ ಸಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನದ ಫಲದಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿರುವುದು ಸಮಾಧಾನಕರ ಸಂಗತಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಈಗಾಗಲೇ 7.16 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ಲಸಿಕೆ ನೀಡುವ ಕಾರ್ಯ ಮುಂದುವರಿಯುತ್ತಿದೆ. ಎಲ್ಲರೂ ಕಡ್ಡಾಯ ಕೋವಿಡ್‌ ನಿಯಮ ಪಾಲನೆ ಮಾಡಬೇಕು ಎಂದು ಹೇಳಿದರು.

ಸಂಸದ ರಾಜಾ ಅಮರೇಶ್ವರನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ, ನಗರಸಭೆ ಅಧ್ಯಕ್ಷ ಈ.ವಿನಯಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಶೀಲ್ದಾರ್ ಡಾ.ಹಂಪಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.