ADVERTISEMENT

ನ್ಯಾಕ್‌ ತಂಡ ಭೇಟಿ: ಸಕಲ ಸಿದ್ಧತೆ

ಪದವಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ,

ಬಸವರಾಜ ಬೋಗಾವತಿ
Published 24 ಜುಲೈ 2018, 16:59 IST
Last Updated 24 ಜುಲೈ 2018, 16:59 IST
ಮಾನ್ವಿಯ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಮಾನ್ವಿಯ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು   

ಮಾನ್ವಿ: ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪ್ರತಿ ದಿನ ಕಾಲೇಜು ಆರಂಭದ ವೇಳೆ ನಾಡಗೀತೆ, ರಾಷ್ಟ್ರಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಆಗಸ್ಟ್ ತಿಂಗಳಲ್ಲಿ ನ್ಯಾಕ್ ಸಮಿತಿಯ ತಂಡ (ರಾಷ್ಟ್ರೀಯ ಪರಿಶೀಲನಾ ಹಾಗೂ ಮಾನ್ಯತಾ ಕೌನ್ಸಿಲ್) ಕಾಲೇಜಿಗೆ ಭೇಟಿ ನೀಡಲಿದ್ದು, ಕಾಲೇಜಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ಕಾಲೇಜಿನ ಕಟ್ಟಡ, ವಿದ್ಯಾರ್ಥಿಗಳಿಗೆ ಸೌಲಭ್ಯಗಳು, ಶೈಕ್ಷಣಿಕ ಚಟುವಟಿಕೆಗಳು ಹಾಗೂ ಶಿಕ್ಷಣದ ಗುಣಮಟ್ಟದ ಕುರಿತು ನ್ಯಾಕ್‌ ತಂಡ ಪರಿಶೀಲನೆ ನಡೆಸಲಿದೆ. ಈ ಹಿಂದೆ 2007ರಲ್ಲಿಯೂ ಕಾಲೇಜಿಗೆ ನ್ಯಾಕ್‌ ತಂಡ ಭೇಟಿ ನೀಡಿ ‘ಬಿ ಪ್ಲಸ್‌’ ದರ್ಜೆಯ ಮಾನ್ಯತೆ ನೀಡಿತ್ತು. ಈಗ ಮತ್ತೆ ನ್ಯಾಕ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ನ್ಯಾಕ್‌ ತಂಡವು ನೀಡುವ ಅಂಕಗಳು ಹಾಗೂ ದರ್ಜೆಯ ಆಧಾರದ ಮೇಲೆ ಕಾಲೇಜಿಗೆ ಉನ್ನತ ಸೌಲಭ್ಯಗಳು ದೊರಕುವ ನಿರೀಕ್ಷೆ ಇದೆ.

ADVERTISEMENT

ನ್ಯಾಕ್‌ ತಂಡದ ಭೇಟಿ ಹಿನ್ನೆಲೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘಗಳ ಪುನರ್‌ ರಚನೆಗೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿಗಳ ಕುಂದುಕೊರತೆ ಆಲಿಸುವುದು, ಶಿಸ್ತು ಮೂಡಿಸುವುದು, ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಸೇರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜಿನಲ್ಲಿ ವಿವಿಧ ಘಟಕಗಳನ್ನು ಸ್ಥಾಪಿಸಲಾಗಿದೆ.

ಸುಸಜ್ಜಿತ ಗ್ರಂಥಾಲಯ ಹಾಗೂ ವಾಚನಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ಕೋರ್ಸ್‌ಗಳನ್ನು ಆರಂಭಿಸಲು ಗುಲಬರ್ಗಾ ವಿಶ್ವವಿದ್ಯಾಲಯದ ಸಂಲಗ್ನತೆಗಾಗಿ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

‘ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸಲು ಪ್ರಸಕ್ತ ವರ್ಷದಿಂದ ಸಮವಸ್ತ್ರ ಹಾಗೂ ಗುರುತಿನ ಚೀಟಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಪಠ್ಯದ ಜತೆಗೆ ಕ್ರೀಡೆ ಸೇರಿ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಎಂದು ಪ್ರಾಚಾರ್ಯ ಯಂಕಣ್ಣ ತಿಳಿಸಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. 2018–19ನೇ ಸಾಲಿನಲ್ಲಿ ಬಿ.ಎ, ಬಿ.ಕಾಂ ಹಾಗೂ ಬಿ.ಎಸ್ಸಿ ಪದವಿ ಕೋರ್ಸ್‌ಗಳಿಗೆ 216 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 605. ಆದರೆ, ಕಾಲೇಜಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಯಂ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಕೊರತೆ ಇದೆ ಎಂದರು.

ಕೊರತೆ: ಕಾಲೇಜಿನಲ್ಲಿ ಒಟ್ಟು 10 ಕಾಯಂ ಉಪನ್ಯಾಸಕರು, ದೈಹಿಕ ಶಿಕ್ಷಣ ನಿರ್ದೇಶಕ, ಅಧೀಕ್ಷಕ, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಪರಿಚಾರಕರು ಹಾಗೂ ಸಹಾಯಕರ ಹುದ್ದೆಗಳು ಖಾಲಿ ಇವೆ. ಉಪನ್ಯಾಸಕರ ಕೊರತೆ ನೀಗಿಸಲು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿವಿಧ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ 31 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ಇತರ ಕಾಲೇಜುಗಳ ಬೋಧಕೇತರ ಸಿಬ್ಬಂದಿಯನ್ನು ಎರವಲು ಸೇವೆಗೆ ಶಿಕ್ಷಣ ಇಲಾಖೆಯಿಂದ ಆದೇಶ ನೀಡಲಾಗಿದ್ದರೂ ಅಲ್ಲಿಂದ ಸೇವೆಯಿಂದ ಬಿಡುಗಡೆ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಕಾಲೇಜಿನ ಹೆಚ್ಚುವರಿ ಕೊಠಡಿಗಳು ಮತ್ತು ಸ್ನಾತಕೋತ್ತರ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗಳು ಅಪೂರ್ಣಗೊಂಡಿವೆ.

ಕಾಲೇಜಿನಲ್ಲಿ ಅಗತ್ಯವಿರುವ ಕಾಯಂ ಉಪನ್ಯಾಸಕರ ನೇಮಕ ಸೇರಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಆಗಸ್ಟ್ ತಿಂಗಳಲ್ಲಿ ನ್ಯಾಕ್‌ ತಂಡ ಭೇಟಿ ನೀಡಲಿದೆ. ಇದರಿಂದ ಕಾಲೇಜಿನ ಅಭಿವೃದ್ಧಿಗೆ ಸಹಾಯವಾಗಲಿದೆ
– ಯಂಕಣ್ಣ,ಕಾಲೇಜಿನ ಪ್ರಾಚಾರ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.