ADVERTISEMENT

ಮತದಾನದ ಮಹತ್ವ ಅರಿತುಕೊಳ್ಳಿ: ಶೇಖ್‌ ತನ್ವೀರ್‌

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 15:04 IST
Last Updated 24 ಡಿಸೆಂಬರ್ 2020, 15:04 IST
ರಾಯಚೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಸ್ಪರ್ಧಾ ಚಟುವಟಿಕೆಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಶೇಖ್ ತನ್ವೀರ್ ಆಸೀಫ್ ಚಾಲನೆ ನೀಡಿದರು
ರಾಯಚೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಸ್ಪರ್ಧಾ ಚಟುವಟಿಕೆಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಶೇಖ್ ತನ್ವೀರ್ ಆಸೀಫ್ ಚಾಲನೆ ನೀಡಿದರು   

ರಾಯಚೂರು: ಪ್ರಜಾಪ್ರಭುತ್ವದಲ್ಲಿ ಆಡಳಿತ ನಿರ್ವಹಣೆ ಸರಿಯಾಗಿ ಸುಭದ್ರವಾಗಿರಬೇಕಾದರೆ ಮತದಾರರ ಪಾತ್ರ ಮುಖ್ಯವಾಗಿದ್ದು, ಮತದಾರರು ಮತದಾನದ ಮಹತ್ವ ಅರಿತು ಚುನಾವಣೆಯಲ್ಲಿ ಅರ್ಹ ವ್ಯಕ್ತಿಗಳಿಗೆ ಮತ ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಸ್ಪರ್ಧಾ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸುಭದ್ರ ಪ್ರಜಾಪ್ರಭುತ್ವಕ್ಕೆ ಕಡ್ಡಾಯವಾಗಿ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು. ಈ ನಿಟ್ಟಿನಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ. ಚಿತ್ರಕಲೆ, ಪ್ರಬಂಧ ಹಾಗೂ ಕ್ವಿಜ್ ಸ್ಪರ್ಧೆ ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ADVERTISEMENT

ಇತ್ತೀಚಿನ ದಿನಗಳಲ್ಲಿ ಯುವಕರು ಮತದಾನದಿಂದ ದೂರ ಉಳಿಯುತ್ತಿದ್ದಾರೆ. 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಯುವಕ, ಯುವತಿಯರು ಮತದಾನದಿಂದ ವಂಚಿತರಾಗಬಾರದು ಎಂದು ಸಲಹೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸದಾಶಿವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಹ್ಮದ್ ಇಸ್ಮಾಯಿಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಗೋನಾಳ, ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಮಲ್ಲನಗೌಡ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ವಿನಾಯಕ ದೇಶಪಾಂಡೆ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.