ADVERTISEMENT

‘ಮತದಾರರೆಲ್ಲರೂ ತಮ್ಮ ಹಕ್ಕು ಚಲಾಯಿಸಿ’

ರಾಷ್ಟ್ರೀಯ ಮತದಾರರ ದಿನಾಚರಣೆ: ಮತದಾನದ ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 15:19 IST
Last Updated 25 ಜನವರಿ 2023, 15:19 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಬುಧವಾರ ಆಯೋಜಿಸಿದ್ದ ಮತದಾನದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಹಸಿರುನಿಶಾನೆ ತೋರಿಸಿದರು. 
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಬುಧವಾರ ಆಯೋಜಿಸಿದ್ದ ಮತದಾನದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಹಸಿರುನಿಶಾನೆ ತೋರಿಸಿದರು.    

ರಾಯಚೂರು: ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಮತದಾನದ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸುವ ಪೂರ್ವ ಮಾತನಾಡಿದರು.

ಮತದಾರರ ದಿನಾಚರಣೆಯಂದು ಜಾಗೃತಿ ಜಾಥಾ ಉತ್ತಮ ಕಾರ್ಯಕ್ರಮವಾಗಿದೆ. ಮತದಾನ ಹಕ್ಕು, ಅದನ್ನು ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯೂ ಆಗಿರುತ್ತದೆ ಎಂದರು.

ADVERTISEMENT

‘ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಘೋಷ ವಾಕ್ಯದಡಿ ಈ ವರ್ಷದ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ಯುವಕರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಜಾಥಾ ಜಿಲ್ಲಾಧಿಕಾರಿ ಕಚೇರಿಯಿಂದ ನಗರಸಭೆ, ಬಸ್ ನಿಲ್ದಾಣ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದವರೆಗೆ ನಡೆಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಉಪವಿಭಾಗಾಧಿಕಾರಿ ರಜನಿಕಾಂತ ಚೌಹಾಣ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೃಷಬೇಂದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.