
ಲಿಂಗಸುಗೂರು: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಸಂವಿಧಾನಬದ್ಧ ಹಕ್ಕು. ಪಾರದರ್ಶಕ ಮತದಾನದ ಮೂಲಕ ದೇಶದ ಅಭಿವೃದ್ಧಿಗೆ ಯೋಗ್ಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ’ ಎಂದು ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಮತದಾನ ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ನಿಯಮಗಳ ಪಾಲನೆಯೂ ಮುಖ್ಯವಾಗಿದೆ. ಮತದಾನದಲ್ಲಿ ಅರ್ಹರೆಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ನಿರ್ಭೀತರಾಗಿ ಮತದಾನ ಮಾಡಬೇಕು. ದೇಶದ ಭವಿಷ್ಯ ನಮ್ಮ ಕೈಯ್ಯಲಿದೆ. ಮತದಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿವಳಿಕೆ ಕೊಡಬೇಕು. ಗುಣಾತ್ಮಕ ಮತದಾನದಿಂದ ದೇಶವನ್ನು ಬಲಿಷ್ಠಗೊಳಿಸಬಹುದು’ ಎದು ಹೇಳಿದರು.
ಪ್ರಧಾನ ನ್ಯಾಯಾಧೀಶ ಅಂಬಣ್ಣ ಕೆ., ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ, ತಹಶೀಲ್ದಾರ್ ಸತ್ಯಮ್ಮ, ಸಹಾಯಕ ಸರಕಾರಿ ಅಭಿಯೋಜಕ ಸಾಹೇಬಗೌಡ ಪಾಟೀಲ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಭೂಪನಗೌಡ ಪಾಟೀಲ, ಕಾಲೇಜಿನ ಪ್ರಾಚಾರ್ಯ ವೆಂಕಟನಾರಾಯಣ ಎಂ. ಇನ್ನಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.