ADVERTISEMENT

ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

ಅಧಿಕಾರಿಗಳಿಗೆ ತಾಲ್ಲೂಕು ಪಂಚಾಯಿತಿ ಇಒ ಪಂಪಾಪತಿ ಹಿರೇಮಠ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2020, 13:17 IST
Last Updated 16 ಏಪ್ರಿಲ್ 2020, 13:17 IST
ಲಿಂಗಸುಗೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು
ಲಿಂಗಸುಗೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು   

ಲಿಂಗಸುಗೂರು: ‘ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಎಚ್ಚರಿಕೆ ವಹಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ ಅವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ‘ಪಂಚಾಯಿತಿ ಆಡಳಿತ ಮಂಡಳಿ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲೆಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಬಹುದೆಂದು ತಿಳಿದು ಖಾಸಗಿ ಕೊಳವೆಬಾವಿ ಅಥವಾ ಪರ್ಯಾಯ ವ್ಯವಸ್ಥೆಗೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು’ ಎಂದು ಸಲಹೆ ನೀಡಿದರು.

‘ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ ಕಾಯ್ದುಕೊಳ್ಳುವ ನಿಯಮದಡಿ ಉದ್ಯೋಗ ಕಲ್ಪಿಸಬೇಕು. ವಿವಿಧ ಯೋಜನೆ ಅಡಿ ಮನೆಗಳ ನಿರ್ಮಾಣ, ಶೌಚಾಲಯ ಇತರೆ ಸೌಲಭ್ಯ ಮನೆ ಮನೆಗೆ ತಲುಪಿಸಲು ತಾವುಗಳು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಸ್ವಚ್ಛತೆ, ರಾಸಾಯನಿಕ ಸಿಂಪಡಣೆಗೆ ಕ್ರಮ ಕೈಗೊಳ್ಳಬೇಕು’ ಎಂದರು.

ADVERTISEMENT

ತಹಶೀಲ್ದಾರ್‌ ಚಾಮರಾಜ ಪಾಟೀಲ್‌ ಮಾತನಾಡಿ, ‘ಪಂಚಾಯಿತಿ ಮಟ್ಟದಲ್ಲಿ ಲಾಕ್‌ಡೌನ್‌ ನಿಯಮಗಳ ಪಾಲನೆ, ಜಾಗೃತಿ ಮೂಡಿಸಲು ಹೆಚ್ಚಿನ ಶ್ರಮವಹಿಸಬೇಕು. ಅನ್ಯ ಜಿಲ್ಲೆ, ರಾಜ್ಯ, ದೇಶಗಳಿಂದ ಬರುವವರ ಬಗ್ಗೆ ಮಾಹಿತಿ ನೀಡಿ ಆಡಳಿತ ಜೊತೆಗೆ ಸಹಕಾರ ನೀಡಬೇಕು’ ಎಂದು ಕೋರಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರುದ್ರಗೌಡ ಪಾಟೀಲ್‌ ಮಾತನಾಡಿ, ‘ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗ್ರಾಮೀಣ ಪ್ರದೇಶದಲ್ಲಿ ಗುಳೆ ಹೋಗಿ ಬಂದವರ ಮಾಹಿತಿ ಸಂಗ್ರಹಿಸಿದ್ದಾರೆ. ಅಧಿಕಾರಿಗಳು ಕೂಡ ಮಾಹಿತಿ ಸಂಗ್ರಹಿಸುವ ಜೊತೆಗೆ ಅಂಗಡಿ ಮುಗ್ಗಟ್ಟು ಬಂದ್‌ ಮಾಡಿಸಿ, ಕಟ್ಟೆಗಳ ಮೇಲೆ, ರಸ್ತೆಗೆ ಜನತೆ ಇಳಿಯದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ತಾಲ್ಲೂಕು ಯೋಜನಾಧಿಕಾರಿ ಸಿದ್ದಪ್ಪ, ರಾಜಶೇಖರ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.