ADVERTISEMENT

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಯೋಜನೆ: ಶಶಿಧರ ಕುರೇರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 12:19 IST
Last Updated 2 ಡಿಸೆಂಬರ್ 2022, 12:19 IST
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್‌ ಕುರೇರ್‌ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಯಿತು.
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್‌ ಕುರೇರ್‌ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಯಿತು.   

ರಾಯಚೂರು: ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಏಳು ತಾಲ್ಲೂಕುಗಳಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಲ್ಲಿ ಪ್ರಗತಿ ಸಾಧಿಸಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗಿದೆ. ಯಾವುದೇ ಯೋಜನೆಯನ್ನು ಅನುಷ್ಠಾನಗೊಳಿಸಲು ಇಚ್ಛಾಶಕ್ತಿ ಅತ್ಯವಶ್ಯಕವಾಗಿದೆ ಎಂದರು.

ADVERTISEMENT

ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 2,627 ಅಂಗನವಾಡಿ ಕೇಂದ್ರಗಳು, 41 ಮಿನಿ ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ 2022-23ನೇ ಸಾಲಿನ ಅಕ್ಟೋಬರ್ ಅಂತ್ಯಕ್ಕೆ 2,50,018 ಫಲಾನುಭವಿಗಳು ಸಮಗ್ರ ಶಿಶು ಅಭಿವೃದ್ದಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದರು.

ಅಂಗನವಾಡಿ ಕೇಂದ್ರಗಳ ಮೂಲಕ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ, ಚುಚ್ಚುಮದ್ದು ಕಾರ್ಯಕ್ರಮ, ಆರೋಗ್ಯ ತಪಾಸಣೆ, ತಾಯಂದಿರಿಗೆ ಆರೋಗ್ಯ ಮತ್ತು ಪೌಷ್ಟಿಕ ಶಿಕ್ಷಣ, ಶಾಲಾ ಪೂರ್ವ ಶಿಕ್ಷಣ ಹಾಗೂ ಮಾಹಿತಿ ಸೇವೆಯನ್ನು ಇಲಾಖೆಯಿಂದ ಒದಗಿಸಲಾಗುತ್ತಿದ್ದು, ಈ ಸೇವೆಗಳನ್ನು ಒದಗಿಸಲು ಹೆಚ್ಚಿನ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.