ADVERTISEMENT

ಮಹಿಳೆಯರು ಧೈರ್ಯವಂತರಾಗಿ: ಶಾಸಕ ಡಾ.ಎಸ್.ಶಿವರಾಜ ಪಾಟೀಲ

ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 12:57 IST
Last Updated 11 ನವೆಂಬರ್ 2022, 12:57 IST
ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ ನಿಮಿತ್ತ ರಾಯಚೂರು ಜಿಲ್ಲಾಧಿಕಾರಿ ಕಚೇರಿಯಿಂದ ರಂಗಮಂದಿರದವರೆಗೂ ಓಬವ್ವ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.
ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ ನಿಮಿತ್ತ ರಾಯಚೂರು ಜಿಲ್ಲಾಧಿಕಾರಿ ಕಚೇರಿಯಿಂದ ರಂಗಮಂದಿರದವರೆಗೂ ಓಬವ್ವ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.   

ರಾಯಚೂರು: ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಧೈರ್ಯವಂತರಾಗಬೇಕು. ಅಂದಾಗ ಮಾತ್ರ ದೇಶ ಮುನ್ನಡೆಯಲು ಸಾಧ್ಯ ಎಂದು ಶಾಸಕ ಡಾ.ಎಸ್.ಶಿವರಾಜ ಪಾಟೀಲ ಹೇಳಿದರು.

ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಎಲ್ಲಾ ರಂಗದಲ್ಲೂ ಮುಂದಿದ್ದಾರೆ. ಈಗಾಗಲೇ ರಾಜಕೀಯ ವಲಯಗಳಲ್ಲಿ ಗ್ರಾಮ ಪಂಚಾಯತ್, ಶಾಸಕ ಸ್ಥಾನ ಹಾಗೂ ಸಂಸದರ ಸ್ಥಾನಕ್ಕಾಗಿ ಮಹಿಳೆಯರಿಗೆ ಹೆಚ್ಚಿನ ಮೀಸಲಾತಿಯನ್ನು ನೀಡಲಾಗುತ್ತಿದ್ದು, ಇನ್ನು ಮುಂದೆ ಸಂಪೂರ್ಣವಾಗಿ ಮಹಿಳೆಯರೇ ದೇಶದಲ್ಲಿ ಆಡಳಿತ ನಡೆಸುವ ಕಾಲ ಬರಲಿದೆ ಎಂದು ಹೇಳಿದರು.

ADVERTISEMENT

ಒನಕೆ ಓಬವ್ವ ಮಹಿಳೆಯಾಗಿದ್ದುಕೊಂಡು ಶತ್ರು ಸೈನ್ಯವನ್ನು ಹಿಮ್ಮಟ್ಟಿಸಿ ನಾಡನ್ನು ಉಳಿಸಿದ್ದಾರೆ. ಅದಕ್ಕಾಗಿ ಈ ನಾಡಿನಲ್ಲಿ ಜನಿಸಿದ ನಾವೆಲ್ಲರೂ ಗರ್ವ ಪಡಬೇಕು ಎಂದರು.

ಕನ್ನಡ ಸಹಾಯಕ ಪ್ರಾಧ್ಯಾಪಕಿ ಡಾ.ಜಯದೇವಿ ಗಾಯಕವಾಡ ಮಾತನಾಡಿ, ಒನಕೆ ಓಬವ್ವ ಜಯಂತಿ ನಾಡಹಬ್ಬವಾಗಿದೆ. ಛಲವಾದಿ ಸಮುದಾಯದ ಮಹಿಳೆಯಾಗಿದ್ದ ಓಬವ್ವ ತನ್ನ ವೀರಾವೇಶದ ಮೂಲಕ ನಾಡಿಗೆ ಮಾದರಿಯಾಗಿದ್ದಾರೆ. ಅಂತಹ ವೀರವನಿತೆ ಹುಟ್ಟಿದ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಸಮಾಜದ ಮುಖಂಡರಾದ ವಸಂತಕುಮಾರ್, ಬಿ.ರಮೇಶ ಇದ್ದರು.

ಭಾವಚಿತ್ರ ಮರವಣಿಗೆ: ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೀರರಾಣಿ ಒನಕೆ ಓಬವ್ವ ಭಾವಚಿತ್ರದ ಅದ್ಧೂರಿ ಮೆರವಣಿಗೆ ಮಾಡಲಾಯಿತು.

ಜಿಲ್ಲಾಧಿಕಾರಿ ಕಚೇರಿಯಿಂದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ರಂಗಮಂದಿರದವರೆಗೆ ಒನಕೆ ಓಬವ್ವ ಅವರ ಭಾವಚಿತ್ರವನ್ನು ಮೆರವಣಿಗೆ ನಡೆಯಿತು.

ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ ಹಾಗೂ ಉಪಾಧ್ಯಕ್ಷೆ ನರಸಮ್ಮ ಮಾಡಗಿರಿ ಅವರು ವೀರರಾಣಿ ಓಬವ್ವ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಅಧಿಕಾರಿಗಳು, ಮುಖಂಡರು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.