ADVERTISEMENT

ಅಕ್ರಮ ಮದ್ಯ ಸರಬರಾಜು: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST

ರಾಮನಗರ: ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಜಿಲ್ಲಾಡಳಿತ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ಹಿಂದುಳಿದ ದಲಿತ ವೇದಿಕೆಯ ಜಿಲ್ಲಾ ಘಟಕದ ಸದಸ್ಯರು ಸೋಮವಾರ ಐಜೂರು ವೃತ್ತದಿಂದ ಕಂದಾಯ ಭವನದವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದರು.

ಕಾನೂನು ಬಾಹಿರವಾಗಿ ನಡೆಯುತ್ತಿರುವ ಮದ್ಯ ಮಾರಾಟಕ್ಕೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ. ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ವಿಫಲರಾಗಿರುವ ಅಧಿಕಾರಿ ವರ್ಗದ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವೇದಿಕೆ ಜಿಲ್ಲಾಧ್ಯಕ್ಷ ಕಲ್ಕೆರೆ ಶಿವಣ್ಣ ಆಗ್ರಹಿಸಿದರು.

ನಕಲಿ ಮದ್ಯ ಸೇವನೆಯಿಂದ ಬಹುತೇಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಈ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಿ, ನಕಲಿ ಮಾರಾಟಗಾರರು ಮತ್ತು ತಯಾರಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.

ಜಿಲ್ಲಾಡಳಿತ ಮತ್ತು ಅಬಕಾರಿ ಇಲಾಖೆ ಈ ನಿಟ್ಟಿನಲ್ಲಿ ನಿರ್ಲಕ್ಷ್ಯತನ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ತಾಲ್ಲೂಕು ಅಧ್ಯಕ್ಷ ಶಿವು ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.