ರಾಮನಗರ: ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿಯ ಮೊದಲ ಭಾಷಾ ಪತ್ರಿಕೆಯ ಪರೀಕ್ಷೆ ಸುಗಮವಾಗಿ ನಡೆಯಿತು.
ಯಾವುದೇ ಪರೀಕ್ಷಾ ಕೇಂದ್ರದಲ್ಲಿಯೂ ನಕಲು, ಅಕ್ರಮ ನಡೆದಿರುವ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಡಿಬಾರ್ ಪ್ರಕರಣವೂ ನಡೆದಿಲ್ಲ ಎಂದು ಉಪ ನಿರ್ದೇಶಕರ ಕಚೇರಿಯ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದ್ದಾರೆ.
ಈ ಬಾರಿ ಜಿಲ್ಲೆಯ 15489 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಇದರಲ್ಲಿ 8229 ಬಾಲಕರಾಗಿದ್ದು, 7260 ಬಾಲಕಿಯರು. ಈ ಪೈಕಿ ಇದೇ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ 13,857 ಆಗಿದೆ. ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳ ಪೈಕಿ ಏಳು ಕೇಂದ್ರಗಳನ್ನು ಸೂಕ್ಷ್ಮ ಎಂದು ಪರಿಗಣಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ.
ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವಾಗಿವಾಗಿ ಘೋಷಿಸಲಾಗಿದ್ದು, ಅಗತ್ಯ ಬಂದೋಬಸ್ತ್ ಕಲ್ಪಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ ಬಳಿಯ ಜೆರಾಕ್ಸ್ ಅಂಗಡಿ ಮುಚ್ಚಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಅಧಿಕಾರಿಗಳ ಭೇಟಿ
ಮಾಗಡಿ: ತಾಲ್ಲೂಕಿನಲ್ಲಿ ಸೋಮವಾರ ನಾಲ್ಕು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ದಂಡಾಧಿಕಾರಿ ನಿರಂಜನ ಬಾಬು ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಕೃಷ್ಣಾ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕಿನಾದ್ಯಂತ ಎಸ್‌ಎಸ್‌ಎಲ್‌ಸಿ ಪರಿಕ್ಷೆ ಯಾವುದೇ ತೊಂದರೆ ಇಲ್ಲದೆ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಬಿ.ಇ.ಒ ಎನ್.ಕೋದಂಡರಾಮಯ್ಯ ತಿಳಿಸಿದರು.
18ಕೇಂದ್ರಗಳಲ್ಲಿ ಪರೀಕ್ಷೆ
ಕನಕಪುರ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಲ್ಲಿ 4343 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದಾರೆ .
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಒಟ್ಟು 36 ಮಂದಿ ಸ್ಥಾನಿಕ ಜಾಗೃತ ದಳವನ್ನು ನೇಮಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶಿವರಾಮೇಗೌಡ ಅವರು ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳಲ್ಲಿ ತಾಲ್ಲೂಕು ಅಧಿಕಾರಿಗಳ ನೇತೃತ್ವದಲ್ಲಿ ಹಾಗೂ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಜಾಗೃತ ದಳವನ್ನು ರಚಿಸಿಲಾಗಿದೆ. ಅಯಾ ಕೇಂದ್ರಗಳಿಗೆ 5 ಮಾರ್ಗಗಳನ್ನು ರಚಿಸಲಾಗಿದ್ದು ಅದರಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವರು ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.