ರಾಮನಗರ: ಮಕ್ಕಳ ಹಕ್ಕುಗಳ ರಕ್ಷಣಾ ಕಾರ್ಯ ಮತ್ತು ಕಲ್ಯಾಣ ಕಾರ್ಯಗಳ ಕುರಿತು ಸಮಗ್ರ ಮಕ್ಕಳ ಅಭಿವೃದ್ಧಿ ಸೊಸೈಟಿಯ ಯೋಜನಾ ನಿರ್ದೇಶಕರು ಮತ್ತು ಯೋಜನಾ ವ್ಯವಸ್ಥಾಪಕರು ಸೋಮವಾರ ಹಮ್ಮಿಕೊಂಡಿದ್ದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಜಿಲ್ಲೆಯ ಮಕ್ಕಳ ರಕ್ಷಣಾಧಿಕಾರಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಭಾಗವಹಿಸಿದ್ದರು.
ಮಿನಿ ವಿಧಾನಸೌಧದಲ್ಲಿ ಸಭಾಂಗಣದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕವೇ ಯೋಜನಾ ನಿರ್ದೇಶಕರು ಜಿಲ್ಲೆಯ ಪ್ರಗತಿ ಕುರಿತು ಅವಲೋಕನ ನಡೆಸಿದರು. ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು, ಅವುಗಳನ್ನು ತಡೆಯುವಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ರಾಧಾ ಅವರು, `ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಕಾರ್ಯಗಳಿಗೆ ಸಂಬಂಧಿಸಿದಂತೆ ಸುಮಾರು 70 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಬಗ್ಗೆ ವಿವಿಧ ಹಂತಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ತರಬೇತಿ, ಕಾರ್ಯಾಗಾರ ನಡೆಸಲಾಗಿದೆ. ಅಂಗನವಾಡಿ ಕಾರ್ಯಕರ್ತರನ್ನು ಸಕ್ರಿಯವಾಗಿ ಬಳಸಿಕೊಳ್ಳಲಾಗುತ್ತಿದೆ. ಎನ್‌ಜಿಒಗಳ ನೆರವು ಪಡೆಯಲಾಗುತ್ತದೆ. ಅಲ್ಲದೆ ಮಾಧ್ಯಮಗಳ ಮೂಲಕ ಜನರಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಕೂಡ ನಡೆದಿದೆ' ಎಂದು ತಿಳಿಸಿದರು.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಶಿವಲಿಂಗಯ್ಯ ಪ್ರತಿಕ್ರಿಯಿಸಿ, `ಸಮಿತಿ ಮುಂದೆ ಬರುವ ಬಹುತೇಕ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡಲಾಗುತ್ತಿದೆ. ಒಂದೆರಡು ಪ್ರಕರಣದಲ್ಲಿ ಮನೆ ವರದಿ ನಿರೀಕ್ಷಿಸಲಾಗುತ್ತದೆ' ಎಂದು ವಿವರಿಸಿದರು.
ಇನ್ನಷ್ಟು ಚುರುಕಿನಿಂದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಹಕಾರ ಪಡೆದು ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗುವಂತೆ ುಕ್ಕಳ ಅಭಿವೃದ್ಧಿ ಸೊಸೈಟಿಯ ಯೋಜನಾ ನಿರ್ದೇಶಕರಾದ ಶಶಿಕಲಾ ಶೆಟ್ಟಿ ಹಾಗೂ ಯೋಜನಾ ವ್ಯವಸ್ಥಾಪಕ ನರ್ಮದಾನಂದ ಸೂಚಿಸಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಾರ್ಜ್ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.