ADVERTISEMENT

`ಶಿಕ್ಷಕರನ್ನು ಒತ್ತಡದಿಂದ ಮುಕ್ತಿಗೊಳಿಸಿ'

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 9:36 IST
Last Updated 6 ಸೆಪ್ಟೆಂಬರ್ 2013, 9:36 IST
ರಾಮನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು
ರಾಮನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು   

ರಾಮನಗರ: `ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರವು ದೊಡ್ಡ ಪ್ರಮಾಣದಲ್ಲಿ ಇರುವ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳದಿರುವುದು ದುರಂತವೇ ಸರಿ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ರಾಮನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ರಾಮನಗರ ಜಿಲ್ಲೆಯಲ್ಲಿ ಸುಮಾರು 800 ಶಿಕ್ಷಕರ ಕೊರತೆ ಇದೆ. ಈ ಪ್ರಮಾಣವನ್ನೇ ಗಮನಿಸಿದರೆ ರಾಜ್ಯದಲ್ಲಿ ಸುಮಾರು 25 ರಿಂದ 30 ಸಾವಿರ ಶಿಕ್ಷಕರ ಕೊರತೆ ಇರುವ ಸಾಧ್ಯತೆ ಇದೆ. ಈ ಕೊರತೆ ನೀಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಖಾಸಗಿಶಾಲೆಗಳನ್ನುರಾಷ್ಟ್ರೀಕರಣಗೊಳಿಸುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಸರ್ಕಾರ ಗೊಂದಲದ ವಾತಾವರಣ ನಿರ್ಮಿಸುತ್ತಿದೆ. ಶೈಕ್ಷಣಿಕ ಸಮಸ್ಯೆಗಳ ಪರಿಹಾರಿಸದೆ ಸರ್ಕಾರ ಬಡ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಅವರು ಕಿಡಿಕಾರಿದರು.

ಸಾವಿರಾರು ಎಂಜಿನಿಯರಿಂಗ್ ಸೀಟುಗಳು ಖಾಲಿ ಇದ್ದರೂ ಬಡ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಿಲ್ಲ. `ಸೀಟ್ ಬ್ಲಾಕಿಂಗ್' ಪ್ರಕರಣಗಳ ಬಗ್ಗೆ ಗಂಭೀರ ಕ್ರಮ ಕೈಗೊಳ್ಳದೆ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮಧ್ಯಾಹ್ನದ ಬಿಸಿಯೂಟ, ಕ್ಷೀರ ಭಾಗ್ಯ, ಶೌಚಾಲಯ ನಿರ್ವಹಣೆ ಸಹಿತ ಶಾಲಾ ನೈರ್ಮಲ್ಯ ಸೇರಿದಂತೆ ವಿವಿಧ ಕೆಲಸಗಳ ಒತ್ತಡದಿಂದ ಶಿಕ್ಷಕರಿಗೆ ಮುಕ್ತಿ ನೀಡಬೇಕಿದೆ. ಶಿಕ್ಷಕರನ್ನು ಪಾಠ, ಪ್ರವಚನಗಳಿಗೆ ಮೀಸಲಾಗಿರಿಸಿ, ಉಳಿದ ಕೆಲಸಗಳಿಗೆ ಅಗತ್ಯ ಸಿಬ್ಬಂದಿ ನೇಮಿಸಬೇಕು. ಶಿಕ್ಷಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಹೀಗಾಗದಿದ್ದಲ್ಲಿ ಶೈಕ್ಷಣಿಕ ಗುಣಮಟ್ಟ ಕುಸಿಯುವ ಆತಂಕವಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಶಿಕ್ಷಕರ ಸಣ್ಣಪುಟ್ಟ ತಪ್ಪುಗಳನ್ನೇ ದೊಡ್ಡದಾಗಿ ಬಿಂಬಿಸಲಾಗುತ್ತಿದ್ದು, ಇದರಿಂದ ಇಡೀ ಶಿಕ್ಷಕ ಸಮುದಾಯ ತಲೆ ತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಶಿಕ್ಷಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕಾರ್ಯಕ್ರಮಗಳನ್ನು ಮಾಧ್ಯಮಗಳು ಪ್ರಸರಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ತೋರಬೇಕು. ರಾಜ್ಯಮಟ್ಟದಲ್ಲಿ ಜಿಲ್ಲೆ ಮೊದಲ ಎರಡು ಸ್ಥಾನದಲ್ಲಿ ಬರುವಂತಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ಸಿ.ರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿಸಮಿತಿ ಅಧ್ಯಕ್ಷ ರಘುಕುಮಾರ್, ಸದಸ್ಯರಾದ ಎಚ್.ಎಲ್.ಚಂದ್ರ, ಧನಂಜಯ, ಸಿಇಒ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕರು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.