ADVERTISEMENT

ಸಮ್ಮೇಳನ: ಉದ್ಘಾಟಕರಿಗಾಗಿ ಹುಡುಕಾಟ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2011, 19:30 IST
Last Updated 26 ಅಕ್ಟೋಬರ್ 2011, 19:30 IST

ರಾಮನಗರ : ಜ್ಞಾನಪೀಠ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ ಆಗಿರುವ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಪೂರ್ವ ನಿಯೋಜಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಎರಡನೇ ಸಮ್ಮೇಳನದ ಉದ್ಘಾಟನಾ ಕಾರ್ಯದಿಂದ ಹಿಂದೆ ಸರಿದಿದ್ದಾರೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಶಾಸಕ ಕೆ.ರಾಜು ತಿಳಿಸಿದರು.

ಹಾಗಾಗಿ ಸಮ್ಮೇಳನದ ಉದ್ಘಾಟನೆ ಕಾರ್ಯಕ್ಕೆ ಯಾರನ್ನು ಆಹ್ವಾನಿಸಬೇಕು ಎಂಬ ಚಿಂತನೆ ನಡೆದಿದ್ದು, ಕೆಲವೇ ದಿನಗಳಲ್ಲಿ ಚರ್ಚಿಸಿ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈಗಾಗಲೇ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಬೈರಮಂಗಲ ರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಸ್ವಾಗತ ಸಮಿತಿ ವತಿಯಿಂದ ಅವರಿಗೆ ಸಾಂಪ್ರದಾಯಿಕವಾಗಿ ಅಧಿಕೃತ ಆಹ್ವಾನವನ್ನೂ ನೀಡಲಾಗಿದೆ. ಅದೇ ರೀತಿ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಲ್ಲೂರು ಪ್ರಸಾದ್ ಅವರು ವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಈ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳಿಗೆ ಮಾತ್ರ ಸೀಮಿತಗೊಳಿಸುವುದಿಲ್ಲ.

ಅವರ ಜತೆಗೆ ರೈತರು, ಯುವ ಜನತೆ, ವಿದ್ಯಾರ್ಥಿಗಳು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲಾಗುವುದು. ರೈತರ ಸಮಸ್ಯೆಗಳು, ಅಂತರ್ಜಲು ಸುಧಾರಣೆ, ಪರಿಸರ ಸೇರಿದಂತೆ ವಿವಿಧ ಬಗೆಯ ವಿಚಾರ ಗೋಷ್ಠಿಗಳು, ಕವಿಗೋಷ್ಠಿಗಳು ಜರುಗಲಿವೆ. ಜನತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಹಾಸ್ಯೋತ್ಸವ ಏರ್ಪಡಿಸಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.
ಮೊದಲ ದಿನ ಅಂದಾಜು 5000 ಜನರನ್ನು ಸೇರಿಸುವ ಉದ್ದೇಶ ಹೊಂದಲಾಗಿದೆ. ಅದ್ಧೂರಿ ಹಾಗೂ ವಿಜೃಂಭಣೆಯಿಂದ ಸಮ್ಮೇಳನ ನಡೆಸಲು ತಯಾರಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಬರ ತಾರತಮ್ಯ: ಬರ ಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ರಾಮನಗರ ಮತ್ತು ಮಾಗಡಿ ತಾಲ್ಲೂಕುಗಳನ್ನು ಕೈಬಿಟ್ಟು ಸರ್ಕಾರ ತಾರತಮ್ಯ ನೀತಿ ಅನುಸರಿಸಿದೆ. ಈ ಎರಡೂ ತಾಲ್ಲೂಕುಗಳಲ್ಲಿನ ಕೆರೆ ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲದ ಕಾರಣ ಈಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಬಿಗಡಾಯಿಸಲಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನೀರಾವರಿ ಪ್ರದೇಶಗಳಾದ ಶ್ರೀರಂಗಪಟ್ಟಣ, ಪಾಂಡವಪುರ, ಮದ್ದೂರು, ಮಂಡ್ಯ ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿರುವ ಸರ್ಕಾರ ಬಯಲು ಸೀಮೆ ಪ್ರದೇಶವಾದ, ಮಳೆಯನ್ನೇ ಆಧರಿಸಿರುವ ರಾಮನಗರ ಮತ್ತು ಮಾಗಡಿಯನ್ನು ಕೈಬಿಟ್ಟಿದ್ದು ಏಕೆ ಎಂದು ಗೊತ್ತಾಗುತ್ತಿಲ್ಲ ಎಂದು ಬೇಸರ ಪಟ್ಟರು.

ಈ ಸಂಬಂಧ ಜಿಲ್ಲಾಧಿಕಾರಿ ಅವರನ್ನು ಪ್ರಶ್ನಿಸಿದರೆ ಅವರು ನಮ್ಮನ್ನು ಸಂಪರ್ಕಿಸದೆ ರಾಜ್ಯ ಸರ್ಕಾರ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಸಿದ್ಧಪಡಿಸಿದೆ ಎನ್ನುತ್ತಾರೆ. ಕೃಷಿ ಅಧಿಕಾರಿಗಳನ್ನು ಮತ್ತು ಕಂದಾಯ ಅಧಿಕಾರಿಗಳನ್ನು ಸಂಪರ್ಕಿಸದೆ ಸರ್ಕಾರ ಈ ರೀತಿ ಅವೈಜ್ಞಾನಿಕವಾಗಿ ನಿರ್ಧಾರ ತೆಗೆದುಕೊಂಡಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು. ಮತ್ತೊಂದೆಡೆ ಜಿಲ್ಲೆಯ ಉಸ್ತುವಾರಿ ಸಚಿವರಾದ ಸಿ.ಪಿ.ಯೋಗೀಶ್ವರ್ ಅವರು ಸೌಜನ್ಯಕ್ಕಾದರೂ ಈ ಸಂಬಂದ ಮೂರು ತಾಲ್ಲೂಕುಗಳ ಶಾಸಕರು ಮತ್ತು ಅಧಿಕಾರಿಗಳನ್ನು ಸಂಪರ್ಕಿಸಿ ಸರಿಯಾದ ಮಾಹಿತಿ ಪಡೆದು ಸರ್ಕಾರಕ್ಕೆ ತಿಳಿಸಬೇಕಿತ್ತು. ಅವರೂ ಹೀಗೆ ಮಾಡಿಲ್ಲ ಎಂದು ಅವರು ದೂರಿದರು.

ಕುಡಿಯುವ ನೀರಿನ ಸಮಸ್ಯೆ: ರಾಮನಗರದ ನಗರಸಭೆ ವ್ಯಾಪ್ತಿಯಲ್ಲಿ ನಾಲ್ಕರಿಂದ ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ಜನ ಸಾಮಾನ್ಯರು ದೀಪಾವಳಿ ಆಚರಿಸುವುದೂ ಕಷ್ಟವಾಗಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ನೀರಿನ ಸಮರ್ಪಕ ಸರಬರಾಜು ಮಾಡುವಲ್ಲಿ ಜಲಮಂಡಳಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದರು.

ಅಲ್ಲದೆ ಕೂಡಲೇ ಜಲಮಂಡಳಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ, ಮುಂದಿನ ಸೋಮವಾರದೊಳಗೆ ಜಲಮಂಡಳಿ ಕಚೇರಿಯನ್ನು ನಗರಸಭೆ ಕಚೇರಿ ಆವರಣಕ್ಕೆ ವರ್ಗಾಯಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ರಾಮನಗರ ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಾಜಶೇಖರ್, ನಗರಸಭೆ ಅಧ್ಯಕ್ಷ ಸಾಬಾನ್ ಸಾಬ್, ಸದಸ್ಯ ಮುಕುಂದ್ ರಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬುಧವಾರ ಶಾಸಕರ ಭೇಟಿ ಸಮಯ
 

ಇನ್ನು ಮುಂದೆ ತಾಲ್ಲೂಕು ಕಚೇರಿಯಲ್ಲಿ ಪ್ರತಿ ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಇದ್ದು, ಜನತೆಯ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದಾಗಿ ಶಾಸಕ ಕೆ.ರಾಜು ತಿಳಿಸಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳಿದ್ದರೆ ಈ ಸಂದರ್ಭದಲ್ಲಿ ತಾಲ್ಲೂಕು ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡುವಂತೆ ಶಾಸಕರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.