ADVERTISEMENT

ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಗಾಂಧಿಭವನದಿಂದ ಹೊರಟು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2018, 9:38 IST
Last Updated 19 ಜೂನ್ 2018, 9:38 IST
ಚನ್ನಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರವು ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದರು
ಚನ್ನಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರವು ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದರು   

ಚನ್ನಪಟ್ಟಣ: ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ನೂರಾರು ರೈತರು ಹಾಗೂ ರೈತ ಮಹಿಳೆಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಗಾಂಧಿಭವನದಿಂದ ಹೊರಟು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ನಂತರ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿ, ರಾಜ್ಯ ಸರ್ಕಾರವು ಈ ಕೂಡಲೇ ರೈತರ ಸಾಲ ಮನ್ನಾ ಮಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಚಾಮರಸ ಪಾಟೀಲ್ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಾವು ಅಧಿಕಾರಕ್ಕೆ ಬಂದ ತಕ್ಷಣ ರೈತರ ಎಲ್ಲ ರೀತಿಯ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದರು. ಆದರೆ ಸರ್ಕಾರ ರಚನೆಯಾಗಿ ಇಷ್ಟು ದಿನವಾದರೂ ಸಾಲ ಮನ್ನಾ ಮಾಡಿಲ್ಲ. ಇದು ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಿದೆ ಎಂದರು.

ADVERTISEMENT

ರೈತರು ಹಲವಾರು ಸಮಸ್ಯೆ ಎದುರಿಸುತ್ತಿದ್ದು, ಅವರ ನೆರವಿಗೆ ರಾಜ್ಯ ಸರ್ಕಾರ ಬರಬೇಕು. ಮೊದಲು ಸಾಲ ಮನ್ನಾ ವಿಚಾರದಲ್ಲಿ ನುಡಿದಂತೆ ನಡೆದುಕೊಳ್ಳಬೇಕು. ರೈತರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ರೈತರ ಸಾಲಮನ್ನಾ ವಿಚಾರದಲ್ಲಿ ಕುಮಾರಸ್ವಾಮಿ ಸರ್ಕಾರ ನಿರ್ಲಕ್ಷ್ಯ ತೋರಿಸುತ್ತಿರುವುದು ಸರಿಯಲ್ಲ. ರಾಜಕೀಯ ಒಳ ಜಗಳ ಬಿಟ್ಟು ರಾಜ್ಯದ ರೈತರ ಹಿತ ಕಾಯಲು ಮುಂದಾಗಬೇಕು. ಮುಖ್ಯಮಂತ್ರಿಗಳು ಈ ಕೂಡಲೇ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚಿಸಿ ರೈತರ ಎಲ್ಲಾ ರೀತಿಯ ಸಾಲ ಮನ್ನಾ ಮಾಡುವ ಮೂಲಕ ಮಾತು ಉಳಿಸಿಕೊಳ್ಳಲಿ ಎಂದು ಒತ್ತಾಯಿಸಿದರು.

ರೈತ ಮುಖಂಡರಾದ ಎಂ.ರಾಮಣ್ಣ, ಕೆ.ಮಲ್ಲಯ್ಯ ಭಾಗವಹಿಸಿದ್ದರು. ನಂತರ ತಹಶೀಲ್ದಾರ್ ಪುರಂದರ ಅವರಿಗೆ ಮನವಿ ಪತ್ರ
ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.