ADVERTISEMENT

ಸುಖಕರ ಹೆರಿಗೆಗೆ ಕಾಳಜಿ ಅಗತ್ಯ: ಜಿಲ್ಲಾಧಿಕಾರಿ

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2016, 11:50 IST
Last Updated 10 ಆಗಸ್ಟ್ 2016, 11:50 IST
ರಾಮನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ 900ಕ್ಕೂ ಹೆಚ್ಚು ಉದರದರ್ಶಕ ಶಸ್ತ್ರ ಚಿಕಿತ್ಸೆಯನ್ನು ಮಾಡಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಎಸ್.ವಿ. ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು
ರಾಮನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ 900ಕ್ಕೂ ಹೆಚ್ಚು ಉದರದರ್ಶಕ ಶಸ್ತ್ರ ಚಿಕಿತ್ಸೆಯನ್ನು ಮಾಡಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಎಸ್.ವಿ. ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು   

ರಾಮನಗರ: ತಾಯಿ ಮತ್ತು ಮಗುವಿನ ಏಳಿಗೆಗಾಗಿ ಸರ್ಕಾರವು ಜಾರಿಗೆ ತಂದಿರುವ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವ ಕೆಲಸ ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಆರ್. ಮಮತಾ ಹೇಳಿದರು.

ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಎಲ್ಲಾ ರೀತಿಯ ಸೌಕರ್ಯಗಳು ದೊರೆಯುತ್ತಿರುವುದರಿಂದ ಜನರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ. ರಾಜೇಶ್ ‘ಗರ್ಭಿಣಿಯರು ವೈದ್ಯರ ಸಲಹೆಗಳನ್ನು ಅನುಸರಿಸಿ ಪೌಷ್ಠಿಕವಾದ ಆಹಾರ ಸೇವಿಸಬೇಕು. ಇದರಿಂದ ಆರೋಗ್ಯವಂತ ಮಗು ಜನಿಸಲು ಸಾಧ್ಯವಾಗುತ್ತದೆ’ ಎಂದರು.

ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿ ಡಾ.ಆರ್.ಎನ್. ಲಕ್ಷ್ಮೀಪತಿ  ಮಾತನಾಡಿ, ‘ಬಾಣಂತಿ, ನವಜಾತ ಶಿಶುವಿನ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮವನ್ನು ಪ್ರತಿ ತಿಂಗಳ 9ರಂದು ನಡೆಸಲಾಗುತ್ತದೆ’ ಎಂದು ಅವರು ತಿಳಿಸಿದರು.

ಗರ್ಭಿಣಿಯಾದಾಗಿನಿಂದ ಹಿಡಿದು ಪ್ರಸವವಾಗುವವರೆಗೆ ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ತಿಳಿಸಿಕೊಟ್ಟು ಸರ್ಕಾರದಿಂದ ಲಭ್ಯವಿರುವ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುವುದು. ಗರ್ಭಿಣಿಯರು 12 ವಾರಗಳೊಳಗಾಗಿ ಆಶಾ ಕಾರ್ಯಕರ್ತೆ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಮತ್ತು ಅಂಗನವಾಡಿಗಳಲ್ಲಿ ನೋಂದಾಯಿಸಿಕೊಂಡು ತಾಯಿ ಕಾರ್ಡ್‌ ಪಡೆಯಬೇಕು.

ಹೆರಿಗೆಯಾಗುವ ಮುನ್ನ 4 ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಸ್ವಯಂ ಪ್ರೇರಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಆ ದಿನದಂದು ಉಚಿತ ಸೇವೆಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

ರಾಮನಗರ ಜಿಲ್ಲೆಯಲ್ಲಿ 2015–-16 ರಲ್ಲಿ ಗರ್ಭಿಣಿಯರ ನೋಂದಣಿಯ ವಾರ್ಷಿಕ ಗುರಿ 15,893 ಆಗಿದ್ದು, 14,390 ಮಂದಿ ನೋಂದಣಿ ಮಾಡಿಸಿರುತ್ತಾರೆ. 2016–-17ನೇ ಮೊದಲ ಹಂತದಲ್ಲಿ 3759 ಗುರಿ ಇದ್ದು, 3171 ನೋಂದಣಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಜನನ ಪ್ರಮಾಣ 2015–-16ರಲ್ಲಿ 11.14 ಇದ್ದು, 13,224 ಹೆರಿಗೆಯಾಗಿದೆ. 2016–-17ರಲ್ಲಿ (ತ್ರೈ ಮಾಸಿಕದಲ್ಲಿ) ಜನನ ಪ್ರಮಾಣದಲ್ಲಿ 10.53 ಇದ್ದು, 2467 ಹೆರಿಗೆಯಾಗಿದೆ ಎಂದು ವಿವರಿಸಿದರು.

ಕುಟುಂಬ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ 900ಕ್ಕೂ ಹೆಚ್ಚು ಉದರದರ್ಶಕ ಶಸ್ತ್ರಚಿಕಿತ್ಸೆಯನ್ನು ಮಾಡಿ ರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಎಸ್.ವಿ. ನಾರಾ ಯಣಸ್ವಾಮಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವರಾಜ್ ಹೆಗಡೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಂ.ಕೆ. ಮುನಿರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಜಿ.ಎಂ. ಸರ್ವೇಶ್ವರ್, ತಾಲ್ಲೂಕು ಮಹಿಳಾ ಸಂರಕ್ಷಣಾಧಿಕಾರಿ ಸಿ.ಎಸ್.ನಾಗಲಾಂಬಿಕೆ,

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಎನ್. ಪೂರ್ಣಿಮಾ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ದಿನೇಶ್, ಮಹಿಳಾ ಜಾಗೃತಿ ವೇದಿಕೆಯ ಅಧ್ಯಕ್ಷೆ ಎಂ. ಜಯಮ್ಮ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಕೆ.ವಿ.ಶಿವರಾಜ್ ಇತರರು ಇದ್ದರು.

*
ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಗರ್ಭಿಣಿಯರಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಯಾವುದೇ ರೀತಿಯ ತೊಂದರೆಯಾಗದ ಹಾಗೆ ಹೆಚ್ಚಾಗಿ ಸಾಮಾನ್ಯ ಹೆರಿಗೆಯನ್ನು ಮಾಡಿಸುವುದಕ್ಕೆ ಆದ್ಯತೆ ನೀಡಬೇಕು
-ಡಾ. ಬಿ.ಆರ್. ಮಮತಾ,
ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT