ADVERTISEMENT

ಸ್ಥಳೀಯ ಸಂಸ್ಥೆಗಳನ್ನು ಬಲವರ್ಧನೆಗೊಳಿಸಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2011, 18:30 IST
Last Updated 15 ಫೆಬ್ರುವರಿ 2011, 18:30 IST

ಮಾಗಡಿ: ಪ್ರಜಾಸತ್ತೆಯ ಆಶಯಗಳು ಬಲಗೊಳ್ಳಬೇಕಾದರೆ ಗ್ರಾಮ ಪಂಚಾಯಿತಿ ವ್ಯವಸ್ಥೆ ಸಮರ್ಪಕವಾಗಿರಬೇಕು. ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಕೆ.ಧನಂಜಯ  ಇಲ್ಲಿ ಅಭಿಪ್ರಾಯಪಟ್ಟರು.

ಅವರು ತಾಲ್ಲೂಕಿನ ತಿಪ್ಪಸಂದ್ರದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಬಾಪೂಜಿ ಕಂಡ ರಾಮರಾಜ್ಯದ ಕನಸು ನನಸಾಗಬೇಕಾದರೆ ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ಸಬಲಗೊಳಿಸಲು ಸರ್ಕಾರ ಮುಂದಾಗಬೇಕು. ಆರ್ಥಿಕ ಅಭಿವೃದ್ಧಿಯ ಜೊತೆಗೆ ಮತದಾರರಲ್ಲಿ  ಶೈಕ್ಷಣಿಕ ಮತ್ತು ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಕುರಿತು ಮನವರಿಕೆ ಮಾಡಿಕೊಡಬೇಕಿದೆ.ಸಂವಿಧಾನದ ಮೂಲ ಉದ್ದೇಶಗಳನ್ನು ಮತದಾರರಿಗೆ ತಿಳಿಸಿ ಜಾಗೃತಿ ಮೂಡಿಸದಿದ್ದರೆ ಪ್ರಜಾಪ್ರಭುತ್ವದ ಯಶಸ್ಸಿಗೆ ತೊಡಕಾದೀತು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಧನಂಜಯ ವಿವರಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಜಿ.ವಿ.ರಾಮಣ್ಣ ಮಾತನಾಡಿ, ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸಿ, ನೈರ್ಮಲ್ಯದ ಬಗ್ಗೆ ತಿಳುವಳಿಕೆ ಮೂಡಿಸಬೇಕಿದೆ ಎಂದರು. ತಾಲ್ಲೂಕು ಪಂಚಾಯಿತಿ ಸದಸ್ಯೆ ಶಾಂತಮ್ಮ ನರಸಿಂಹಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯ ಹರೀಶ್, ಕೃಷ್ಣ ಗ್ರಾಮಾಭಿವೃದ್ಧಿ ಕುರಿತು ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಗಂಗಣ್ಣ ಅಧ್ಯಕ್ಷತೆವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.