ADVERTISEMENT

224 ಕ್ಷೇತ್ರಗಳಲ್ಲೂ ಕೆಪಿಜೆಪಿ ಪಕ್ಷದ ಅಭ್ಯರ್ಥಿಗಳು ಕಣಕ್ಕೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 7:12 IST
Last Updated 7 ಫೆಬ್ರುವರಿ 2018, 7:12 IST

ಶಿವಮೊಗ್ಗ‌: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ) ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದು, ಜಿಲ್ಲೆಯಿಂದ ಸ್ಪರ್ಧೆ ಮಾಡ ಬಯಸುವ ಸೂಕ್ತ  ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ ಎಂದು ಪಕ್ಷದ ಸಾರ್ವಜನಿಕ ಸಂಪರ್ಕ ಅಧಿಕಾರಿ ತಟ್ಟೆಕೆರೆ ಮಲ್ಲೇಶ್ ತಿಳಿಸಿದರು.

ಪಕ್ಷದ ಸಂಸ್ಥಾಪಕ ಅಧ್ಯಕ್ಷ ಡಿ.ಮಹೇಶ್ ಗೌಡ ಮತ್ತು ರಾಷ್ಟ್ರೀಯ ಅಧ್ಯಕ್ಷ ಉಪೇಂದ್ರ ಕುಮಾರ್ ಆದೇಶ ಮತ್ತು ಮಾರ್ಗದರ್ಶನದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಪಕ್ಷ ಸ್ಥಾಪನೆಯಾಗಿ ಒಂದು ವರ್ಷವಾಗಿದ್ದು, ಶೇ 100ರಷ್ಟು ಪಾರದರ್ಶಕ ಆಡಳಿತ ನೀಡಬೇಕು ಎನ್ನುವ ಉದ್ದೇಶದಿಂದ ಪಕ್ಷ ಸ್ಥಾಪನೆಯಾಗಿದೆ. ರೈತರು, ವಿದ್ಯಾರ್ಥಿಗಳು, ಕಾರ್ಮಿಕರು, ನಿರುದ್ಯೋಗಿಗಳು, ಮಹಿಳೆಯರು ಹಾಗೂ ಬಡವರ ಸಬಲೀಕರಣಕ್ಕೆ ಒತ್ತು ನೀಡಿ ಶ್ರಮಿಸಲಿದೆ. ಫೆಬ್ರುವರಿ ಅಂತ್ಯದ ವೇಳೆಗೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಪಕ್ಷದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಈ ಬಾರಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಿಂದಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಚಿಂತನೆ ಇದೆ ಎಂದು ಮಾಹಿತಿ ನೀಡಿದರು.

ADVERTISEMENT

ಮುಂದಿನ ವಿಧಾನಸಭಾ ಚುನಾವಣೆಗೆ ಜಿಲ್ಲೆ ವ್ಯಾಪ್ತಿಯಲ್ಲಿನ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಬಯಸುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಮಾಹಿತಿಗೆ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಮೊ.9845114705, 9986603226 ಗೆ ಸಂಪರ್ಕಿಸಬಹುದು ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಆರ್.ಶಿವಕುಮಾರ್, ರಾಜ್ಯ ಕಾರ್ಯದರ್ಶಿ ಗಜೇಂದ್ರ ಶರ್ಮ, ಪಕ್ಷದ ಮುಖಂಡ ಸಂಜಯ್ ಶರ್ಮ ಅವರೂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.