ರಾಮನಗರ: ಹಾಲಿನ ಡೇರಿಯೊಂದಕ್ಕೆ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಕಕ್ಕೆ ಲಂಚ ಪಡೆಯುತ್ತಿದ್ದ ಸಹಕಾರ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಶಿವಾನಂದ ಎಂಬುವರನ್ನು ಎಸಿಬಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ ವಶಕ್ಕೆ ಪಡೆದಿದ್ದಾರೆ.
ಕನಕಪುರ ತಾಲ್ಲೂಕಿನ ಅರೇಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಹಾಗೂ ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಿಸುವಂತೆ ಕೋರಿ ಡೇರಿಯ ಸಿಇಒ ಗೀತಾ ಇಲಾಖೆಗೆ ಮನವಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಆರೋಪಿ ಶಿವಾನಂದ 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಗೀತಾ ಈ ಸಂಬಂಧ ಎಸಿಬಿಗೆ ದೂರು ನೀಡಿದ್ದರು. ಗುರುವಾರ ಮಧ್ಯಾಹ್ನ ರಾಮನಗರದ ಸಹಾಯಕ ನಿಬಂಧಕರ ಕಚೇರಿಯಲ್ಲಿ ಆರೋಪಿಯು ಮಾಗಡಿಯ ಕೃಷಿ ಪತ್ತಿನ ಸಹಕಾರ ಸಂಘವೊಂದರ ಕಾರ್ಯದರ್ಶಿ ಚಂದ್ರಶೇಖರ್ ಎಂಬುವರ ಮೂಲಕ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.